ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ಮರುಗುವ ಘಟನೆಯೊಂದು ನಡೆದಿದೆ. ಗಂಡನ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದ ನಾಲ್ಕು ತಿಂಗಳ ಗರ್ಭಿಣಿ ಶ್ವೇತಾ (30) ಅವರು ಚಿಕಿತ್ಸೆ ಫಲಕಾರಿಯಾಗದೆ ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಶ್ವೇತಾ ಅವರಿಗೆ ಕಳೆದ ಕೆಲವು ಸಮಯದಿಂದ ಅತ್ತೆ–ಮಾವ ಹಾಗೂ ಮನೆಯವರು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಮಾರ್ಚ್ 29 ರಂದು ಶ್ವೇತಾ ಹೊಡಬಟ್ಟೆಯ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಇಂದು ಅವರು ಕೊನೆಯುಸಿರೆಳೆದಿದ್ದಾರೆ.
“ನಮ್ಮ ಮಗಳು ಹೇಡಿಯಲ್ಲ, ಆಕೆ ಆತ್ಮಹತ್ಯೆ ಮಾಡಿಕೊಳ್ಳುವವಳಲ್ಲ. ಆಸ್ತಿ ಮತ್ತು ಮನೆಯ ಜಾಗದ ವಿಚಾರಕ್ಕಾಗಿ ಅತ್ತೆ–ಮಾವ ಹಾಗೂ ಮನೆಯವರು ಆಕೆಗೆ ಸತತವಾಗಿ ಚಿತ್ರಹಿಂಸೆ ನೀಡುತ್ತಿದ್ದರು. ಇದು ಆತ್ಮಹತ್ಯೆಯಲ್ಲ, ಅವರೇ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ” ಎಂದು ಶ್ವೇತಾ ಅವರ ಪೋಷಕರು ಮತ್ತು ಸಂಬಂಧಿಕರು ಗಂಭೀರವಾಗಿ ಆರೋಪಿಸಿದ್ದಾರೆ. ಹಿರಿಯ ಮಗ ಮತ್ತು ಸೊಸೆಯ ಮೇಲಿನ ಪ್ರೀತಿಗಾಗಿ ಶ್ವೇತಾ ಅವರನ್ನು ಮನೆಯಿಂದ ಹೊರಹಾಕಲು ಈ ರೀತಿ ಮಾಡಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮೃತಳ ಪೋಷಕರು ಸೊರಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಶ್ವೇತಾ ಅವರ ಮಾವ ಸಣ್ಣಪ್ಪ, ಅತ್ತೆ ಜಾನಕಿ, ಹೇಮಂತ್ ಮತ್ತು ದಿವ್ಯಾ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಗರ್ಭಿಣಿ ಮಗಳ ಸಾವಿನಿಂದ ಕಂಗಾಲಾಗಿರುವ ಪೋಷಕರು, ತಮಗೆ ನ್ಯಾಯ ಬೇಕು ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಸೊರಬ ಪೊಲೀಸರು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


