ಆರ್ಥಿಕ ದಿವಾಳಿಯಿಂದ ಜರ್ಜರಿತಗೊಂಡಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಅರಾಜಕತೆ, ದೊಂಬಿ ಗಂಭೀರ ಸ್ವರೂಪ ಪಡೆದುಕೊಂಡಿದ್ದು ಇಂದು ದೇಶದಲ್ಲಿ ಹಠಾತ್ತಾನೆ ತುರ್ತು ಘೋಷಣೆ ಮಾಡಲಾಗಿದೆ. ಹಂಗಾಮಿ ಅಧ್ಯಕ್ಷರಾಗಿ ರನಿಲ್ ವಿಕ್ರಂ ಸಿಂಘೆ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ದೇಶದಾದ್ಯಂತ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ.
ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ತಮ್ಮ ಪತ್ನಿ ಹಾಗೂ ಇಬ್ಬರು ಅಂಗರಕ್ಷಕ ಜೊತೆ ಮಾಲ್ಡೀವ್ಸ್‌ಗೆ ಪಲಾಯನ ಮಾಡಿರುವ ಸುದ್ಧಿ ತಿಳಿಯುತ್ತಿದ್ದಂತೆ ಜನಾಕ್ರೋಶ ಭುಗಿಲೆದ್ದಿದೆ.
ಗೊಟಬಯ ರಾಜೀನಾಮೆಗೆ ಪಟ್ಟು ಹಿಡಿದು ಇಂದು ಸಾವಿರಾರು ಜನರು ರಾಜಧಾನಿ ಕೊಲಂಬೊ ನಗರದ ರಸ್ತೆಗಿಳಿದು ಉಗ್ರ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.
ರೊಚ್ಚಿಗೆದ್ದ ಗುಂಪು ಶ್ರೀಲಂಕಾ ಸಂಸತ್ತಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಭರ್ಜರಿ ಜಟಾಪಟಿ ನಡೆಯಿತು. ಏಕಾಏಕಿ ಆಕ್ರೋಶಗೊಂಡ ಜನರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ಅಶ್ರುವಾಯು ಸಿಡಿಸಿದರು. ಆದರೆ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಕಾರಣ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಹಿಂಸಾಚಾರದಲ್ಲಿ ೧೦೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಶ್ರೀಲಂಕಾದ ಪಶ್ಚಿಮ ಪ್ರಾಂತ್ಯದಲ್ಲಿ ಕರ್ಫ್ಯೂ ಹೇರಲಾಗಿದೆ. ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿದರೆ, ಅವರನ್ನು ತಕ್ಷಣ ಬಂಧಿಸುವಂತೆ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಂ ಸಿಂಘೆ ಆದೇಶ ಹೊರಡಿಸಿದ್ದಾರೆ.
ಮತ್ತೊಂದೆಡೆ ಸಾವಿರಾರು ಪ್ರತಿಭಟನಾಕಾರರ ಗುಂಪು ಪ್ರಧಾನ ಮಂತ್ರಿ ಕಚೇರಿ ಎದುರು ಭಾರಿ ಪ್ರತಿಭಟನೆ ನಡೆಸಿದ್ದಾರೆ.
ಹದಗೆಟ್ಟಿರುವ ದೇಶದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಗೊಟಬಯ ರಾಜಪಕ್ಸೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ದೇಶದ ಸಂಸತ್ತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. ಜನರು ಬೀದಿಗಿಳಿದು ವ್ಯಾಪಕ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿದ್ದು, ರಾಜಧಾನಿ ಕೊಲಂಬೊದಲ್ಲಿ ಭದ್ರತೆ ಕೈಗೊಳ್ಳಲಾಗಿದೆ.
ದೇಶದಲ್ಲಿ ತುರ್ತು ಪರಿಸ್ಥಿತಿ ವಿಧಿಸಿರುವ ಬಗ್ಗೆಯೂ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಪ್ರಧಾನಿ ರನಿಲ್ ವಿಕ್ರಂ ಸಿಂಘೆ ತಮ್ಮ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz