ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್ ಗಾಗಿ ಕಳುಹಿಸಲಾಗಿದ್ದ ಕರ್ನಾಟಕದ ನಾಲ್ಕು ಟ್ಯಾಬ್ಲೋ ಪರಿಕಲ್ಪನೆಗಳನ್ನು ಆಯ್ಕೆ ಸಮಿತಿ ತಿರಸ್ಕರಿಸಿದ್ದು, ರಾಜ್ಯದ 7 ಕೋಟಿ ಕನ್ನಡಿಗರಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಟ್ವೀಟ್ (ಎಕ್ಸ್) ಮಾಡಿದ ಸಿದ್ದರಾಮಯ್ಯ, ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಎಂದರು.


