ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದ್ದು, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವುದು ಈಗ ಬಹುತೇಕ ಖಚಿತವಾಗಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೌಟುಂಬಿಕ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ನಗರದಲ್ಲಿ ಇಲ್ಲದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಹಿರಿಯ ಸಚಿವರಾದ ಬೈರತಿ ಸುರೇಶ್ ಸೇರಿದಂತೆ ಹಲವು ನಾಯಕರು ಈ ವೇಳೆ ಸಿದ್ದರಾಮಯ್ಯ ಅವರಿಗೆ ಸಾಥ್ ನೀಡಿದರು.
ನನ್ನ ಜೀವನ ತೆರೆದ ಪುಸ್ತಕ; ಸಿದ್ದರಾಮಯ್ಯ
ರಾಜೀನಾಮೆ ನೀಡಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, “ಹೈಕಮಾಂಡ್ ಎರಡು ದಿನಗಳ ಹಿಂದೆಯೇ ರಾಜೀನಾಮೆ ನೀಡುವಂತೆ ಸೂಚಿಸಿತ್ತು. ಅದರಂತೆ ನಾನು ಇಂದು ರಾಜೀನಾಮೆ ಸಲ್ಲಿಸಿದ್ದೇನೆ. ನನಗೆ ಎರಡು ಬಾರಿ ಕರ್ನಾಟಕದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಇದಕ್ಕಾಗಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ” ಎಂದರು. ಅಲ್ಲದೆ, “ವಿರೋಧ ಪಕ್ಷಗಳು ನನ್ನ ವಿರುದ್ಧ ಸುಳ್ಳು ಕಥೆಗಳನ್ನು ಕಟ್ಟುತ್ತಿವೆ. ನಾನು ಎಂದಿಗೂ ಹಣದ ಹಿಂದೆ ಬಿದ್ದಿಲ್ಲ, ಆಸ್ತಿ ಮಾಡಿಲ್ಲ. ನನ್ನ ರಾಜಕೀಯ ಜೀವನ ಒಂದು ತೆರೆದ ಪುಸ್ತಕ” ಎಂದು ಭಾವುಕರಾಗಿ ನುಡಿದರು.
‘ಕಾವೇರಿ’ಯಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್:
ಇದಕ್ಕೂ ಮುನ್ನ ಬೆಳಿಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಹಿರಿಯ ಸಚಿವರು ಹಾಗೂ ಶಾಸಕರಿಗಾಗಿ ಹಮ್ಮಿಕೊಳ್ಳಲಾಗಿದ್ದ ‘ಬ್ರೇಕ್‌ಫಾಸ್ಟ್ ಮೀಟಿಂಗ್’ನಲ್ಲಿ ಸಿದ್ದರಾಮಯ್ಯ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದರು. ಮುಂದಿನ ಸಿಎಂ ಆಗಲಿರುವ ಡಿ.ಕೆ. ಶಿವಕುಮಾರ್ ಅವರಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಸಚಿವರಿಗೆ ಸೂಚಿಸಿದರು. ಈ ವೇಳೆ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಆಶೀರ್ವಾದ ಪಡೆದರು.
ಭಿನ್ನಮತಕ್ಕೆ ಅವಕಾಶವಿಲ್ಲ ಎಂದ ಹೆಚ್.ಕೆ. ಪಾಟೀಲ್:
ಈ ಕುರಿತು ಪ್ರತಿಕ್ರಿಯಿಸಿರುವ ಕಾನೂನು ಸಚಿವ ಹೆಚ್.ಕೆ. ಪಾಟೀಲ್, “ಹೈಕಮಾಂಡ್ ಸೂಚನೆಯನ್ನು ಸಿಎಂ ಸಿದ್ದರಾಮಯ್ಯ ಅವರು ಸಂತೋಷದಿಂದ ಒಪ್ಪಿಕೊಂಡಿದ್ದಾರೆ. ಮುಂದಿನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಸೂಚಿಸಲಾಗಿದೆ. ಇದು ಏಕಮತದ ತೀರ್ಮಾನವಾಗಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಸಿದ್ದರಾಮಯ್ಯ ಅವರು ರಾಜ್ಯಸಭೆಗೆ ಹೋಗುತ್ತಿಲ್ಲ” ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಮಾಸ್ಟರ್ ಪ್ಲಾನ್; ನಾಲ್ಕು ಡಿಸಿಎಂ ಹುದ್ದೆ ಸೃಷ್ಟಿ?
ಸಿದ್ದರಾಮಯ್ಯ ಅವರ ನಿರ್ಗಮನದ ಬಳಿಕ ಅಹಿಂದ ಹಾಗೂ ವಿವಿಧ ಸಮುದಾಯಗಳ ನಾಯಕರ ಅಸಮಾಧಾನ ತಣಿಸಲು ಕಾಂಗ್ರೆಸ್ ಹೈಕಮಾಂಡ್ ಮಾಸ್ಟರ್ ಪ್ಲಾನ್ ರೂಪಿಸಿದೆ ಎನ್ನಲಾಗಿದೆ. ರಾಜ್ಯದಲ್ಲಿ ಒಟ್ಟು ನಾಲ್ಕು ಉಪಮುಖ್ಯಮಂತ್ರಿ (DCM) ಹುದ್ದೆಗಳನ್ನು ಸೃಷ್ಟಿಸಲು ಚಿಂತನೆ ನಡೆಸಲಾಗುತ್ತಿದ್ದು, ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ. ಪಾಟೀಲ್, ಜಮೀರ್ ಅಹ್ಮದ್ ಖಾನ್ ಹಾಗೂ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೆಸರುಗಳು ಮುಂಚೂಣಿಯಲ್ಲಿ ಕೇಳಿಬರುತ್ತಿವೆ.
ವಿಜಯೇಂದ್ರ ಆಕ್ರೋಶ:
ಈ ಆಡಳಿತ ಬದಲಾವಣೆಯ ಕುರಿತು ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, “ಕಾಂಗ್ರೆಸ್ ಸರ್ಕಾರದ ಆಂತರಿಕ ಕಚ್ಚಾಟದಿಂದಾಗಿ ರಾಜ್ಯದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕ ಆರ್ಥಿಕವಾಗಿ ನೆಲಕಚ್ಚಿದೆ. ಈಗ ಯಾರೇ ಮುಖ್ಯಮಂತ್ರಿಯಾದರೂ ರಾಜ್ಯದ ಪರಿಸ್ಥಿತಿ ಸುಧಾರಿಸಲು ಸಾಧ್ಯವಿಲ್ಲ” ಎಂದು ಟೀಕಿಸಿದ್ದಾರೆ.
ಸದ್ಯ ಡಿ.ಕೆ. ಶಿವಕುಮಾರ್ ಮೇ 31 ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ದಟ್ಟವಾಗಿದೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸದ ಮುಂದೆ ಅಭಿಮಾನಿಗಳು ಸಿಹಿ ಹಂಚಿ ವಿಜಯೋತ್ಸವ ಆಚರಿಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


