ನವದೆಹಲಿ/ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸುದೀರ್ಘ ಸಾರ್ವಜನಿಕ ಜೀವನ ಮತ್ತು ಜನಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಬರೆದುಕೊಂಡಿರುವ ಖರ್ಗೆ, “ಸಿದ್ದರಾಮಯ್ಯ ಅವರ ಸಾರ್ವಜನಿಕ ಜೀವನವು ಸದಾ ಗೌರವ, ಕರುಣೆ ಮತ್ತು ಸಾಮಾಜಿಕ ನ್ಯಾಯದ ಬದ್ಧತೆಯನ್ನು ಪ್ರತಿಬಿಂಬಿಸಿದೆ” ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ತಮ್ಮ ಜೀವನದ ಆರಂಭದ ದಿನಗಳಿಂದಲೂ ಸಮಾಜದಲ್ಲಿ ಸಮಾನತೆ ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡುತ್ತಾ ಬಂದಿದ್ದಾರೆ. ಅತ್ಯಂತ ಸರಳ ಹಿನ್ನೆಲೆಯಿಂದ ಬಂದು, ಕರ್ನಾಟಕದ ಮುಖ್ಯಮಂತ್ರಿಯಾಗಿ ಎರಡು ಬಾರಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿ ಸಮಾಜದ ಸೌಹಾರ್ದತೆ, ಸಮಾನತೆ ಹಾಗೂ ಹಿಂದುಳಿದವರ ಕಲ್ಯಾಣಕ್ಕೆ ಸದಾ ಮೊದಲ ಆದ್ಯತೆ ನೀಡಿದ್ದರು ಎಂದರು.
ಕರ್ನಾಟಕ ರಾಜ್ಯ ಹಾಗೂ ಕಾಂಗ್ರೆಸ್ ಪಕ್ಷವು ಅವರ ಸುದೀರ್ಘ ಸಾರ್ವಜನಿಕ ಸೇವೆ ಮತ್ತು ಕೊಡುಗೆಗೆ ಸದಾ ಕೃತಜ್ಞವಾಗಿರುತ್ತದೆ. ಸಿದ್ದರಾಮಯ್ಯ ಅವರಿಗೆ ಮುಂದಿನ ದಿನಗಳಲ್ಲಿ ಉತ್ತಮ ಆರೋಗ್ಯ ಮತ್ತು ಜನಸೇವೆಯಲ್ಲಿ ಮತ್ತಷ್ಟು ಯಶಸ್ಸು ಸಿಗಲಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹಾರೈಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


