ವಿಜಯಪುರ : ಅನಾರೋಗ್ಯದಿಂದ ಬಳಲುತ್ತಿದ್ದ ಶತಮಾನದ ಸಂತ, ನಡೆದಾಡುವ ದೇವರು, ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (82) ನಿನ್ನೆ ಸಂಜೆ 6.05 ಕ್ಕೆ ಲಿಂಗೈಕ್ಯರಾಗಿದ್ದು, ಸಿದ್ದೇಶ್ವರ ಶ್ರೀಗಳ ಆಶಯದಂತೆ ಇಂದು ಸಂಜೆ ಜ್ಞಾನಯೋಗಾಶ್ರಮದ ಆವರಣದಲ್ಲೇ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ.
ಶ್ರೀ ಸಿದ್ದೇಶ್ವರ ಶ್ರೀಗಳು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಜನಿಸಿದ್ದರು. ಎರಡನೇ ವಿವೇಕಾನಂದರು ಎಂಬ ಖ್ಯಾತಿ ಪಡೆದಿದ್ದರು. ಸಿದ್ದೇಶ್ವರ ಸ್ವಾಮಿಜಿಯವರು ಬಿಜ್ಜರಗಿ ಗ್ರಾಮದ ಸಾಮಾನ್ಯ ರೈತ ಕುಟುಂಬದಲ್ಲಿ 1941 ಅಕ್ಟೋಬರ್ 24 ರಂದು ಜನಿಸಿದರು. ಸಿದ್ದಗೊಂಡಪ್ಪ ಇವರ ಬಾಲ್ಯದ ಹೆಸರು.
ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ ನಾಲ್ಕನೇ ತರಗತಿವರೆಗೆ ಓದಿದ ನಂತರ ಅವರು ಮಲ್ಲಿಕಾರ್ಜುನ ಸ್ವಾಮಿಗಳ ಬಳಿ ಬಂದರು. ಬೆಳೆಯುವ ಪೈರು ಮೊಳಕೆಯಲ್ಲೇ ಎಂಬಂತೆ ಬಾಲಕ ಸಿದ್ಧೇಶ್ವರನ ಚುರುಕುತನ ಮಲ್ಲಿಕಾರ್ಜುನ ಸ್ವಾಮಿಗಳ ಗಮನಕ್ಕೆ ಬರಲು ತಡವಾಗಲಿಲ್ಲ. ತಾವು ಪ್ರವಚನ ಮಾಡುವ ಸ್ಥಳಗಳಿಗೆ ಅವರು ಸಿದ್ಧೇಶ್ವರರನ್ನು ಕರೆದೊಯ್ಯ ತೊಡಗಿದರು. ಜೊತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಪಾಸು ಮಾಡಿದರು.
ಇನ್ನು ಭಾರತ ಸರಕಾರ ನೀಡುವ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಶ್ರೀ ಹಿಂದುರುಗಿಸಿದ ಅವರು. ಹೇಳಿದ್ದಿಷ್ಟು, ಪ್ರಶಸ್ತಿ ಬಗ್ಗೆ ಅಪಾರ ಗೌರವವಿದೆ. ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಕ್ಕೆ ಧನ್ಯವಾದಗಳು. ಆದರೆ ನಾನೊಬ್ಬ ಸರಳ ವ್ಯಕ್ತಿ. ಸಾಮಾನ್ಯ ಜೀವನ ನಡೆಸುತ್ತ, ಆಧ್ಯಾತ್ಮಿಕ ಬೋಧನೆಯ ಮೂಲಕ ಜನರ ಜೀವನ ಉದಾತ್ತಗೊಳಿಸುವುದು ಉದ್ದೇಶ ನನ್ನದು. ಹಾಗಾಗಿ ಪ್ರಶಸ್ತಿಗಳ ಅವಶ್ಯತೆಯು ನನಗಿಲ್ಲ. ಎಲ್ಲ ಗೌರವಾಧರಗಳೊಂದಿಗೆ ಈ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ. ಅನ್ಯಥಾ ಭಾವಿಸದಿರಿ ಎಂದಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


