ನವದೆಹಲಿ: ದೇಶದಲ್ಲಿ ಅಡುಗೆ ಅನಿಲ (LPG) ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಹೊಸ ನಿಯಮವನ್ನು ಜಾರಿಗೆ ತಂದಿದೆ. ಇನ್ನು ಮುಂದೆ ಗ್ರಾಹಕರು ಒಂದು ಸಿಲಿಂಡರ್ ಪಡೆದ ನಂತರ ಮುಂದಿನ ಬುಕ್ಕಿಂಗ್ ಮಾಡಲು ಕನಿಷ್ಠ 21 ರಿಂದ 25 ದಿನಗಳ ಕಾಲ ಕಾಯುವುದು ಕಡ್ಡಾಯವಾಗಿದೆ.
ಈ ಮೊದಲು ಗ್ರಾಹಕರು 15 ದಿನಗಳ ಅಂತರದಲ್ಲಿ ಸಿಲಿಂಡರ್ ಬುಕ್ ಮಾಡುತ್ತಿದ್ದರು. ಆದರೆ ಹೊಸ ನಿಯಮದ ಪ್ರಕಾರ, ಈ ಅವಧಿಯನ್ನು ಕನಿಷ್ಠ 25 ದಿನಗಳಿಗೆ ಏರಿಸಲಾಗಿದೆ. ಗ್ಯಾಸ್ ಸಿಲಿಂಡರ್ ಗಳ ಅಕ್ರಮ ದಾಸ್ತಾನು ಮತ್ತು ಕಾಳಸಂತೆ (Black Marketing) ವ್ಯವಹಾರವನ್ನು ತಡೆಗಟ್ಟುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ದೇಶದಲ್ಲಿ ಎಲ್ ಪಿಜಿ ಕೊರತೆಯಾಗದಂತೆ ನೋಡಿಕೊಳ್ಳಲು ತೈಲ ಸಂಸ್ಕರಣಾಗಾರಗಳಿಗೆ ಉತ್ಪಾದನೆ ಹೆಚ್ಚಿಸಲು ಸರ್ಕಾರ ಸೂಚನೆ ನೀಡಿದೆ. ಅಲ್ಲದೆ, ವಾಣಿಜ್ಯ ಬಳಕೆಯ ಸಿಲಿಂಡರ್ಗಳಿಗಿಂತ ಗೃಹ ಬಳಕೆದಾರರಿಗೆ (Domestic LPG) ಹೆಚ್ಚಿನ ಆದ್ಯತೆ ನೀಡುವಂತೆ ಆದೇಶಿಸಲಾಗಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದ್ದರೂ, ಭಾರತದಲ್ಲಿ ಸದ್ಯಕ್ಕೆ ಪೆಟ್ರೋಲ್, ಡೀಸೆಲ್ ಮತ್ತು ಎಲ್ ಪಿಜಿ ಬೆಲೆಗಳು ಏರಿಕೆಯಾಗುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ. ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್ ಗೆ 130 ಡಾಲರ್ ದಾಟುವವರೆಗೂ ಬೆಲೆ ಏರಿಕೆ ಮಾಡದಿರಲು ನಿರ್ಧರಿಸಲಾಗಿದೆ.
ಭಾರತಕ್ಕೆ ಎಲ್ ಪಿಜಿ ಪೂರೈಸಲು ಅಲ್ಜೀರಿಯಾ, ಆಸ್ಟ್ರೇಲಿಯಾ, ಕೆನಡಾ ಮತ್ತು ನಾರ್ವೆಯಂತಹ ದೇಶಗಳು ಮುಂದೆ ಬಂದಿವೆ. ಹೀಗಾಗಿ ದೇಶದಲ್ಲಿ ಇಂಧನದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದೆ ಎಂದು ಸರ್ಕಾರ ಭರವಸೆ ನೀಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


