ಕೊರಟಗೆರೆ : ಕೊರಟಗೆರೆ ವಿಧಾನಸಭಾ ಕ್ಷೇತ್ರದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 1,95,244 ಮತದಾರರು ನೋಂದಣಿಯಾಗಿದ್ದಾರೆ ಎಂದು ಮತದಾರರ ನೋಂದಣಾಧಿಕಾರಿ ಸೋಮಪ್ಪ ಕಡುಕೋಳ ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪತ್ರಿಕಾ ಪ್ರತಿನಿಧಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.
ಎಸ್ ಐಆರ್ ಪ್ರಕ್ರಿಯೆಗೂ ಮುನ್ನ ಕ್ಷೇತ್ರದಲ್ಲಿ 2,09,495 ಮತದಾರರಿದ್ದರು. ಕರಡು ಮತದಾರರ ಪಟ್ಟಿಯಲ್ಲಿ ಈ ಸಂಖ್ಯೆ 1,92,748ಕ್ಕೆ ಇಳಿಕೆಯಾಗಿತ್ತು. ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಂತಿಮ ಪಟ್ಟಿಯಲ್ಲಿ 1,95,244 ಮತದಾರರು ದಾಖಲಾಗಿದ್ದಾರೆ ಎಂದು ವಿವರಿಸಿದರು.
ಅಂತಿಮ ಪಟ್ಟಿಯ ಪ್ರಕಾರ ಕ್ಷೇತ್ರದಲ್ಲಿ 96,715 ಪುರುಷ ಮತದಾರರು, 98,523 ಮಹಿಳಾ ಮತದಾರರು ಹಾಗೂ ಆರು ತೃತೀಯ ಲಿಂಗದ ಮತದಾರರಿದ್ದಾರೆ. ಕ್ಷೇತ್ರದ ಲಿಂಗಾನುಪಾತ 1,019 ಇದೆ. ಒಟ್ಟು 256 ಮತಗಟ್ಟೆಗಳಿದ್ದು, ಹೊಸದಾಗಿ 2,786 ಮತದಾರರನ್ನು ಸೇರ್ಪಡೆ ಮಾಡಲಾಗಿದೆ. 290 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಇದರಿಂದ ನಿವ್ವಳ 2,496 ಮತದಾರರ ಹೆಚ್ಚಳವಾಗಿದೆ ಎಂದು ತಿಳಿಸಿದರು.
ಕ್ಷೇತ್ರದಲ್ಲಿ 18ರಿಂದ 19 ವರ್ಷ ವಯಸ್ಸಿನ 2,637 ಯುವ ಮತದಾರರು ಹಾಗೂ 2,552 ವಿಕಲಚೇತನ ಮತದಾರರಿದ್ದಾರೆ. ಎಸ್ಐಆರ್ ಪ್ರಕ್ರಿಯೆಯಡಿ 10,557 ನೋಟಿಸ್ಗಳನ್ನು ಜಾರಿಗೊಳಿಸಿ ವಿಚಾರಣೆ ನಡೆಸಲಾಗಿದೆ ಎಂದು ಹೇಳಿದರು.
ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ಸೂಚಿಸಲಾದ ಕಾರಣಗಳ ವಿವರ ನೀಡಿದ ಅವರು, ಮೃತಪಟ್ಟಿರುವ 6,112 ಮಂದಿ, ಶಾಶ್ವತವಾಗಿ ಸ್ಥಳಾಂತರಗೊಂಡಿರುವ 7,705 ಮಂದಿ, ಪತ್ತೆಯಾಗದ 516 ಮಂದಿ ಹಾಗೂ ಈಗಾಗಲೇ ನೋಂದಣಿಯಾಗಿರುವ 2,414 ಮಂದಿ ಸೇರಿದಂತೆ ಒಟ್ಟು 16,747 ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಶರತ್ ಕುಮಾರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್, ಜೆಡಿಎಸ್ ಅಧ್ಯಕ್ಷ ಕಾಮರಾಜು, ಬಿಜೆಪಿ ಅಧ್ಯಕ್ಷ ರುದ್ರೇಶ್, ಲಕ್ಷ್ಮಣ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವೆಂಕಟೇಶ್ ಮೂರ್ತಿ, ಕಾಂಗ್ರೆಸ್ ಮುಖಂಡರಾದ ರಘುವೀರ್, ಹನುಮಂತರಾಜು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
