ತುಮಕೂರು: ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಿನಿ ಒಲಿಂಪಿಕ್ಸ್ ನಲ್ಲಿ ತುಮಕೂರಿನ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ಸು ಸಾಧಿಸುವ ಉದ್ದೇಶದಿಂದ ಕಯಾಕಿಂಗ್, ಕನೋಯಿಂಗ್ ಹಾಗೂ ಶೂಟಿಂಗ್ ಕ್ರೀಡೆಗಳಿಗೆ ವಿಶೇಷ ತರಬೇತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಬೆಳೆಸುವ ಮತ್ತು ಜಿಲ್ಲೆಯ ಕ್ರೀಡಾ ಪ್ರತಿಭೆಗಳಿಗೆ ಉತ್ತಮ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.
ನಗರದ ಅಮಾನಿಕೆರೆಯಲ್ಲಿ ಕಳೆದ ಮಾರ್ಚ್ 15 ರಿಂದಲೇ ಕಯಾಕಿಂಗ್ ಮತ್ತು ಕನೋಯಿಂಗ್ ತರಬೇತಿ ಆರಂಭವಾಗಿದ್ದು, ಇಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ಈಗಾಗಲೇ ವಿವಿಧ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದಾರೆ. ವೈಶಾಖ್ ನಲ್ಲಿ ನಡೆದ ಸೌತ್ ಏಷ್ಯನ್ ಕ್ರೀಡೆ ಹಾಗೂ ಭೂಪಾಲ್ ನಲ್ಲಿ ನಡೆದ ರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಿದ ತುಮಕೂರಿನ ವಿದ್ಯಾರ್ಥಿಗಳು 4 ಚಿನ್ನ, 3 ಬೆಳ್ಳಿ ಹಾಗೂ 5 ಕಂಚಿನ ಪದಕಗಳನ್ನು ಬಾಚಿಕೊಳ್ಳುವ ಮೂಲಕ ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾರೆ ಎಂದು ಅವರು ತಿಳಿಸಿದರು.
ಸ್ಥಳೀಯ ಮಕ್ಕಳಿಗೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಅಗತ್ಯ ಮೂಲಸೌಕರ್ಯಗಳು ಮತ್ತು ಅತ್ಯುತ್ತಮ ತರಬೇತುದಾರರನ್ನು ಒದಗಿಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರಸ್ತುತ ಆಧುನಿಕ ಯುಗದಲ್ಲಿ ಮೊಬೈಲ್ ಬಳಕೆಯಿಂದ ಮಕ್ಕಳು ಮೈದಾನ ಕ್ರೀಡೆಗಳಿಂದ ದೂರವಾಗುತ್ತಿದ್ದು, ಶಾಲಾ ಶಿಕ್ಷಕರು ಮತ್ತು ಪೋಷಕರು ಮಕ್ಕಳನ್ನು ಕ್ರೀಡೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಬೇಕು. ಕ್ರೀಡೆಯಿಂದ ಮಕ್ಕಳಲ್ಲಿ ಏಕಾಗ್ರತೆ, ಮಾನಸಿಕ ಸದೃಢತೆ ಮತ್ತು ದೈಹಿಕ ಕ್ಷಮತೆ ಹೆಚ್ಚಾಗಲಿದೆ ಎಂದು ಅವರು ಹೇಳಿದರು.
ಮಕ್ಕಳನ್ನು ಕ್ರೀಡಾಸ್ಪರ್ಧೆಗಳಿಗೆ ಅಣಿಗೊಳಿಸಲು ಜಿಲ್ಲೆಯಲ್ಲಿ ಉತ್ತಮ ತರಬೇತುದಾರರು ಲಭ್ಯವಿದ್ದು, ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಘುಚಂದ್ರ ಅವರಿಗೆ ಇನ್ನೆರಡು ದಿನಗಳಲ್ಲಿ ದಿನಾಂಕ ನಿಗದಿಪಡಿಸಿ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸುವಂತೆ ಸೂಚನೆ ನೀಡಲಾಗಿದೆ. ತುಮಕೂರಿನಿಂದ ಬಲವಾದ ಕ್ರೀಡಾ ತಂಡವನ್ನು ರೂಪಿಸುವ ಗುರಿ ಹೊಂದಲಾಗಿದ್ದು, ಶಾಲಾ–ಕಾಲೇಜುಗಳ ಪ್ರಾಚಾರ್ಯರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ತರಬೇತಿಯಲ್ಲಿ ಭಾಗವಹಿಸುವಂತೆ ಉತ್ತೇಜಿಸಬೇಕು ಎಂದು ಅವರು ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಕಯಾಕಿಂಗ್–ಕನೋಯಿಂಗ್ ಅಕಾಡೆಮಿ ಕಾರ್ಯದರ್ಶಿ ಕ್ಯಾಪ್ಟನ್ ದಿಲೀಪ್, ಜಲಕ್ರೀಡೆಗಳಲ್ಲಿ ಭಾಗವಹಿಸಲು ಜಿಲ್ಲೆಯ ಕ್ರೀಡಾಪಟುಗಳು ಹೆಚ್ಚಿನ ಆಸಕ್ತಿ ತೋರಬೇಕು ಹಾಗೂ ಮುಂಬರುವ ದಸರಾ ರಜೆಯನ್ನು ಈ ತರಬೇತಿಯ ಸದುಪಯೋಗಕ್ಕೆ ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ (ಟುಡಾ) ಆಯುಕ್ತ ಉಮೇಶ್‌ಚಂದ್ರ ಎನ್.ಆರ್., ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ್ ಸೇರಿದಂತೆ ವಿವಿಧ ಕಾಲೇಜುಗಳ ಪ್ರಾಚಾರ್ಯರು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
