ತುರುವೇಕೆರೆ: ಕೋಡಿ ನಾಗಸಂದ್ರ ಟಿಬಿ ಕ್ರಾಸ್‌ನಲ್ಲಿ ಶ್ರೀ ವಿನಾಯಕ ಮಾರುತಿ ಸಂಘದಿಂದ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮವು ಮೇ 7ರಿಂದ 8ರವರೆಗೆ ನಡೆಯಲಿದೆ. 31 ಅಡಿ ಎತ್ತರದ ಆಂಜನೇಯ ವಿಗ್ರಹ ಅನಾವರಣ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಅವರು ಪ್ರವಾಸಿ ಮಂದಿರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ನಾಳೆ (ಮೇ 8) ಮಧ್ಯಾಹ್ನ 12:30 ಗಂಟೆಗೆ ನಡೆಯುವ ಧಾರ್ಮಿಕ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ವಹಿಸುವರು. ಈ ಸಂದರ್ಭ ಅವರುಗಳು ಕಳಸ ಸ್ಥಾಪನೆ ಮಾಡಿ, ಆಶೀರ್ವಚನ ನೀಡಲಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ನೆರವೇರಿಸುವರು. ಮೈಸೂರು ಲೋಕಸಭಾ ಕ್ಷೇತ್ರದ ಸದಸ್ಯ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಕೇಂದ್ರ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ, ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ರಾಜ್ಯಸಭಾ ಸದಸ್ಯ ಜಗ್ಗೇಶ್, ಮಾಜಿ ಶಾಸಕ ಮಸಾಲ ಜಯರಾಮ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಶುಕ್ರವಾರ ನಡೆಯುವ ಕಾರ್ಯಕ್ರಮಕ್ಕೆ ಅಕ್ಕಪಕ್ಕದ ಗ್ರಾಮಗಳ ಭಕ್ತರು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಈ ಮೂಲಕ ಮನವಿ ಮಾಡಿದರು. ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಸದಸ್ಯರಾದ ಮಾವಿನಕೆರೆ ವಿಜಿ, ಮುಂಗುಕುಪ್ಪೆ ಬಸವರಾಜು, ಜೆಡಿಎಸ್ ವಕ್ತಾರ ವೆಂಕಟಾಪುರ ಯೋಗೇಶ್ ಸೇರಿದಂತೆ ಇತರರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


