ತುಮಕೂರು: ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಜನವರಿ 21ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ತ್ರಿವಿಧ ದಾಸೋಹಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಲಿದ್ದಾರೆ.
ಮೇಘಾಲಯ ರಾಜ್ಯದ ರಾಜ್ಯಪಾಲರಾದ ಸಿ.ಹೆಚ್. ವಿಜಯಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಶ್ರೀ ಸಿದ್ದಗಂಗಾ ಮಠದ ಅಧ್ಯಕ್ಷ ಶ್ರೀ ಸಿದ್ಧಲಿಂಗ ಮಹಾಸ್ವಾಮಿ ಹಾಗೂ ಉತ್ತಾಧಿಕಾರಿ ಶ್ರೀ ಶಿವ ಸಿದ್ಧೇಶ್ವರ ಸ್ವಾಮಿ, ಮೈಸೂರಿನ ಶ್ರೀ ಸುತ್ತೂರು ವೀರಸಿಂಹಾಸನ ಸಂಸ್ಥಾನ ಮಠದ ಅಧ್ಯಕ್ಷ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ಶ್ರವಣಬೆಳಗೊಳ ಜೈನಮಠದ ಜಗದ್ಗುರು ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿ, ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಜಾನಪದ ವಿದ್ವಾಂಸರಾದ ನಾಡೋಜ ಡಾ:ಗೊ.ರು.ಚನ್ನಬಸಪ್ಪ ಅವರಿಗೆ ಸಿದ್ಧಗಂಗಾಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮೈಸೂರಿನ ಸಾಹಿತಿ ಡಾ.ಹೆಚ್.ಟಿ. ಶೈಲಜಾ ಹಾಗೂ ತುಮಕೂರಿನ ಸಮಾಜ ಸೇವಕ ಜಿ.ಎನ್. ಬಸವರಾಜಪ್ಪ ಅವರಿಗೆ ಸಿದ್ಧಗಂಗಾ ಶಿವಕುಮಾರಶ್ರೀ ಪ್ರಶಸ್ತಿ, ಬೆಂಗಳೂರಿನ ಎಸ್. ಶಿವಾನಂದ ಶರ್ಮ, ಎಸ್.ಆರ್. ರೇಣುಕಾರಾಧ್ಯ, ವೆಂಕಟೇಶ ಗೌಡ, ಚಾಮರಾಜ ನಗರ ಜಿಲ್ಲೆ ಮುಳ್ಳೂರಿನ ಶಿವಕುಮಾರಮೂರ್ತಿ, ಚಿಕ್ಕಮಗಳೂರು ಜಿಲ್ಲೆ ಬಾಸೂರಿನ ಬಿ.ಎಂ. ಪರಮೇಶ್ವರಪ್ಪ(ಮರಣೋತ್ತರ) ಸಂಘಸಿರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಅಂದು ಸಂಜೆ 6 ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಶ್ರೀ ಸಿದ್ಧಗಂಗಾ ಮಠದ ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx