ಕೊರಟಗೆರೆ: ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 18 ರಿಂದ ಆರಂಭವಾಗುವ ಹಿನ್ನಲೆಯಲ್ಲಿ ಕೊರಟಗೆರೆ ಮತ್ತು ಮಧುಗಿರಿ ತಾಲ್ಲೂಕುಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿದರು.
ಕೊರಟಗೆರೆ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಉತ್ತಮ ರೀತಿಯಲ್ಲಿ ಬರೆಯುವಂತೆ ಆತ್ಮಸ್ಥೈರ್ಯವನ್ನು ತುಂಬಿ, ಪೂರ್ವ ಸಿದ್ಧತ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ತರಗತಿಯನ್ನು ತೆಗೆದುಕೊಂಡು ವಿದ್ಯಾರ್ಥಿಗಳು ಉತ್ತೀರ್ಣರಾಗುವಂತೆ ಕ್ರಮವಹಿಸಲು ಸಂಬಂಧಪಟ್ಟ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರಿಗೆ ಸಲಹೆ ಸೂಚನೆಗಳನ್ನು ನೀಡಿದರು.
ಕೊರಟಗೆರೆ ನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳು ಆಹಾರದ ಗುಣಮಟ್ಟ ಮತ್ತು ವಸತಿ ನಿಲಯದ ಪರಿಸರವನ್ನು ವೀಕ್ಷಿಸಿದರು. ವಸತಿ ನಿಲಯವನ್ನು ಉತ್ತಮವಾಗಿ ನಿರ್ವಹಿಸಿರುವುದು ಕಂಡು ಬಂದಿದ್ದು ವಸತಿ ನಿಲಯದ ಮೇಲ್ವಿಚಾರಕರನ್ನು ಅಭಿನಂದಿಸಿ ಇನ್ನು ಉತ್ತಮವಾಗಿ ಕಾರ್ಯ ನಿರ್ವಹಿಸುವಂತೆ ಮಾರ್ಗದರ್ಶನ ನೀಡಿದರು.
ಕೊರಟಗೆರೆ ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಒಳಾಂಗಣ ಶಟಲ್ ಬ್ಯಾಡ್ಮಿಂಟನ್ ಕೋರ್ಟ್ ಗೆ ಭೇಟಿ ನೀಡಿ ಕಾಮಗಾರಿಯನ್ನು ಪರಿವೀಕ್ಷಿಸಿದರು.
ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಬೈಚಾಪುರದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮುಂಬರುವ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮವಾಗಿ ಅಂಕಗಳನ್ನು ಗಳಿಸುವ ನಿಟ್ಟಿನಲ್ಲಿ ಅಧ್ಯಯನ ನಡೆಸುವಂತೆ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯವನ್ನು ತುಂಬಿದರು.
ನಂತರ ಮಧುಗಿರಿಯ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಅನುತ್ತೀರ್ಣ ಆದಂತಹ ವಿದ್ಯಾರ್ಥಿಗಳಿಗೆ ಹೆಚ್ಚಿನ ತರಗತಿ ನಡೆಸಿ ಉತ್ತೀರ್ಣರಾಗುವಂತೆ ಮಾಡಲು ಶಿಕ್ಷಕರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮಂಜುನಾಥ್ ಕೆ, ಇಓ ಅಪೂರ್ವ,ಸಮಾಜ ಕಲ್ಯಾಣ ಇಲಾಖೆಯ ಯಮುನಾ, ಪ ಪಂ ಮುಖ್ಯಾಧಿಕಾರಿ ಉಮೇಶ್, ಆರ್ ಐ ಮಹೇಶ್, ವಿ ಎ ಪವನ್ ಸೇರಿದಂತೆ ಇತರರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


