ತುಮಕೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನಾರಚನೆಯ ಬಗ್ಗೆ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದ ಚರ್ಚೆಗಳಿಗೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಹತ್ವದ ಸುಳಿವು ನೀಡಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಂಪುಟ ಪುನಾರಚನೆಯ ಸುಳಿವು ಇರುವುದರಿಂದಲೇ ಸುಮಾರು 30 ಶಾಸಕರು ಸಚಿವ ಸ್ಥಾನದ ಆಕಾಂಕ್ಷೆಯೊಂದಿಗೆ ದೆಹಲಿಗೆ ತೆರಳಿದ್ದಾರೆ” ಎಂದು ತಿಳಿಸಿದರು.
ಮೂರ್ನಾಲ್ಕು ಬಾರಿ ಶಾಸಕರಾದವರು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಡುವುದು ಅವರ ಹಕ್ಕು, ಅದರಲ್ಲಿ ಯಾವುದೇ ತಪ್ಪಿಲ್ಲ ಎಂದ ಪರಮೇಶ್ವರ್, ಮುಖ್ಯಮಂತ್ರಿಗಳ ಬದಲಾವಣೆ ಅಥವಾ ಸಂಪುಟ ಪುನಾರಚನೆಯ ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.
ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಯಲು ಹಿರಿಯ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ನೇಮಿಸಲಾಗಿದೆ. ಅವರು ಅಕ್ರಮಗಳನ್ನು ಪತ್ತೆ ಹಚ್ಚಿ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದಾರೆ, ಇದರಿಂದಾಗಿಯೇ ಎಫ್ ಐಆರ್ ದಾಖಲಾಗುತ್ತಿವೆ ಎಂದು ಜೈಲಿನ ಸುಧಾರಣಾ ಕ್ರಮಗಳ ಬಗ್ಗೆ ವಿವರಿಸಿದರು.
ಇನ್ನೂ, ಕೇಂದ್ರ ಸರ್ಕಾರ ಮಂಡಿಸುತ್ತಿರುವ 33% ಮಹಿಳಾ ಮೀಸಲಾತಿ ಮಸೂದೆಯನ್ನು ಸ್ವಾಗತಿಸಿದ ಅವರು, ಇದು ಕಾಂಗ್ರೆಸ್ ನ ಹಳೆಯ ಕನಸಾಗಿತ್ತು. ಆದರೆ ಮೋದಿ ಸರ್ಕಾರ ಈ ಬಿಲ್ ತರುವ ಮೊದಲು ಸರ್ವಪಕ್ಷಗಳ ಸಭೆ ಕರೆದು ಚರ್ಚಿಸುವುದು ಸೂಕ್ತ ಎಂದು ಸಲಹೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


