ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ತುಮಕೂರು(ದ) ಜಿಲ್ಲೆ ಹಾಗೂ ಸಿದ್ಧಗಂಗಾ ಮಠದ ಸಿದ್ಧಗಂಗಾ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ಅಕ್ಟೋಬರ್ 17 ರಿಂದ 19ರವರೆಗೆ ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಸಿದ್ಧಗಂಗಾ ಸನಿವಾಸ ಪ್ರೌಢಶಾಲೆಯಲ್ಲಿ ರಾಜ್ಯ ಮಟ್ಟದ ಬ್ಯಾಂಡ್ ವಾದನ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಕೆ. ಮನಮೋಹನ್ ತಿಳಿಸಿದ್ದಾರೆ.
ಈ ಸ್ಪರ್ಧೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 900 ಸ್ಪರ್ಧಾಳುಗಳನ್ನೊಳಗೊಂಡ 30 ತಂಡಗಳು ಭಾಗವಹಿಸಲಿದ್ದು, ಅಕ್ಟೋಬರ್ 17ರಂದು ಸಂಜೆ 4:30 ಗಂಟೆಗೆ ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸ್ಪರ್ಧೆಯನ್ನು ಉದ್ಘಾಟಿಸುವರು.
ಶ್ರೀ ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಮ.ನಿ.ಪ್ರ.ಸ್ವ. ಪರಮಪೂಜ್ಯ ಶ್ರೀ ಸಿದ್ಧಲಿಂಗಮಹಾಸ್ವಾಮಿಗಳ ದಿವ್ಯ ಸಾನಿಧ್ಯವಹಿಸುವರು. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಧ್ವಜಾರೋಹಣ ನೆರವೇರಿಸುವರು.
ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಪ್ರತಿಜ್ಞಾ ಸ್ವೀಕಾರ ಮಾಡುವರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಕ್ರೀಡಾಜ್ಯೋತಿ ಸ್ವೀಕಾರ ಮಾಡುವರು. ಶಾಸಕ ಜಿ.ಬಿ.ಜ್ಯೋತಿಗಣೇಶ್ ಗೌರವ ವಂದನೆ ಸ್ವೀಕಾರ ಮಾಡುವರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸುವರು ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296