ಮೈಸೂರು: ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿ ಮತ್ತು ಬೆಳೆಹಾನಿಯನ್ನು ಪರಿಶೀಲಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಮೈಸೂರು ಜಿಲ್ಲೆಯ ವಿವಿಧ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಸಾಲ ವಸೂಲಾತಿ ಹೆಸರಿನಲ್ಲಿ ರೈತರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಕರಾರುವಾಕ್ ಎಚ್ಚರಿಕೆ ನೀಡಿದ್ದಾರೆ.
ಬರ ಪರಿಸ್ಥಿತಿಯಿಂದ ರೈತರು ಆರ್ಥಿಕ ಸಂಕಷ್ಟದಲ್ಲಿದ್ದು, ಈ ವೇಳೆ ಸಾಲ ವಸೂಲಾತಿ ಹೆಸರಿನಲ್ಲಿ ರೈತರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಎಚ್ಚರಿಸಿದ್ದಾರೆ.
ಕೆ.ಆರ್. ನಗರ ತಾಲೂಕಿನ ಕಂಚುಗಾರನ ಕೊಪ್ಪಲು ಹಾಗೂ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮಗಳಿಗೆ ಭೇಟಿ ನೀಡಿದ ಡಿಸಿಎಂ, ಮಳೆ ಕೊರತೆಯಿಂದ ರಾಗಿ, ಜೋಳ, ತಂಬಾಕು ಸೇರಿದಂತೆ ಮೊಳಕೆ ಹಂತದಲ್ಲೇ ಒಣಗಿಹೋಗಿರುವ ಬೆಳೆಗಳನ್ನು ಪರಿಶೀಲಿಸಿದರು.
ಇನ್ನೆರಡು ವಾರಗಳಲ್ಲಿ ಕೇಂದ್ರ ಸರ್ಕಾರಕ್ಕೆ ಸಮಗ್ರ ಬರ ವರದಿ ಸಲ್ಲಿಸಲಾಗುವುದು. ಎನ್‌ಡಿಆರ್‌ಎಫ್ ನಿಯಮಗಳನ್ನು ಸಡಿಲಗೊಳಿಸಿ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ಅಂತರರಾಷ್ಟ್ರೀಯ ಹವಾಮಾನ ವರದಿಯ ಪ್ರಕಾರ ಎಲ್ ನಿನೋ ಕಾರಣದಿಂದ 123 ವರ್ಷಗಳ ಬಳಿಕ ಮಳೆ ನಿಂತುಹೋಗುವ ಆತಂಕವಿದ್ದು, ಸೆಪ್ಟೆಂಬರ್ ನಂತರದ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.
ತಾಂತ್ರಿಕ ತಂಡದ ಸಲರೆಯಂತೆ ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆ ಮಾಡಲು ಆದೇಶ ನೀಡಲಾಗಿದ್ದು, ಇದರಿಂದ ತುಂತುರು ಮಳೆ ಬಂದು ಬೆಳೆಗಳಿಗೆ ಅನುಕೂಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹುಣಸೂರು ಹಾಗೂ ಪಿರಿಯಾಪಟ್ಟಣ ಭಾಗದಲ್ಲಿ ತಂಬಾಕು ಬೆಳೆಗೆ ತೀವ್ರ ಹಾನಿಯಾಗಿದ್ದು, ಕೇಂದ್ರ ನಿಯಮದಂತೆ ವಾಣಿಜ್ಯ ಬೆಳೆಗೆ ಪರಿಹಾರ ಸಿಗದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳೊಂದಿಗೆ ಸಂಪುಟದಲ್ಲಿ ಚರ್ಚಿಸಿ ರೈತರಿಗೆ ನೆರವು ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ಡಿ. ರವಿಶಂಕರ್, ಹರೀಶ್‌ಗೌಡ, ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ್ ರೆಡ್ಡಿ ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
