ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆಯನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್ ಅವರು ವಿಷಯ ಪ್ರಸ್ತಾಪಿಸಿ, ರಕ್ತಹೀನತೆ ಮತ್ತು ಅಪೌಷ್ಠಿಕತೆಯಿಂದ ಮಹಿಳೆಯರು ಮತ್ತು ಮಕ್ಕಳು ಬಳಲುತ್ತಿರುವ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಅನೇಮಿಯಾದಿಂದ ಬಳಲುತ್ತಿರುವ ಮಹಿಳೆಯರು ಮತ್ತು ಹದಿಹರೆಯದವರ ಸಂಖ್ಯೆ ಸುಮಾರು 2 ಕೋಟಿ ಎಂದು ಗುರುತಿಸಲಾಗಿದೆ. ಇದರ ನಿವಾರಣೆಗೆ 185 ಕೋಟಿ ರೂ ವೆಚ್ಚದಲ್ಲಿ ಕಾರ್ಯಕ್ರಮ ರೂಪಿಸಲಾಗುತ್ತಿದ್ದು, 2030 ರ ವೇಳೆಗೆ ರಾಜ್ಯದಲ್ಲಿ ಈ ಪ್ರಮಾಣದಲ್ಲಿ ಗಣನೀಯವಾಗಿ ಕಡಿಮೆಗೊಳಿಸುವ ಗುರಿ ಹೊಂದಲಾಗಿದೆ ಎಂದರು.
ರಾಜ್ಯದಲ್ಲಿ ಇತ್ತೀಚೆಗೆ ಬೆಳಕಿಗೆ ಬಂದ ಭ್ರೂಣ ಹತ್ಯೆ ಕುರಿತಂತೆ ಸದಸ್ಯ ಯು.ಬಿ. ವೆಂಕಟೇಶ್ ಪ್ರಸ್ತಾಪಿಸಿದರು. ಈ ಪ್ರಕರಣವನ್ನು ಈಗಾಗಲೇ ಸಿಓಡಿ ತನಿಖೆಗೆ ಆದೇಶಿಸಿದ್ದು, ಇದರಲ್ಲಿ ಭಾಗಿಯಾದ ಎಲ್ಲರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.


