ತುಮಕೂರು: ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಫೋನ್ ಬಳಕೆಯ ವ್ಯಸನವನ್ನು ತಪ್ಪಿಸಲು ಬೇಸಿಗೆ ಶಿಬಿರಗಳು ಅತ್ಯಂತ ಉಪಯುಕ್ತವಾಗಿವೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ನೂರುನ್ನೀಸಾ ಅವರು ಅಭಿಪ್ರಾಯಪಟ್ಟರು.
ನಗರದಲ್ಲಿ ಇತ್ತೀಚೆಗೆ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ‘ಮಕ್ಕಳ ಬೇಸಿಗೆ ಶಿಬಿರ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಆಟಪಾಠಗಳಿಗಿಂತ ಮೊಬೈಲ್ ನಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಇಂತಹ ಶಿಬಿರಗಳು ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರತರಲು ಒಂದು ‘ಸುವರ್ಣಾವಕಾಶ’ ಎಂದು ನ್ಯಾಯಾಧೀಶರು ತಿಳಿಸಿದರು.
ವಿಶೇಷವಾಗಿ ಸರ್ಕಾರಿ ನೌಕರಿಯಲ್ಲಿರುವ ಪೋಷಕರಿಗೆ ರಜೆಯ ಸಮಯದಲ್ಲಿ ಮಕ್ಕಳನ್ನು ಸಂಭಾಳಿಸುವುದು ಸವಾಲಿನ ಕೆಲಸವಾಗಿರುತ್ತದೆ. ಅಂತಹವರಿಗೆ ಇಂತಹ ಶಿಬಿರಗಳು ಆಸರೆಯಾಗಲಿವೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎಸ್.ಸಿದ್ದರಾಮಣ್ಣ ಅವರು ಮಾತನಾಡಿ, “ಮಕ್ಕಳು ಬೇಸಿಗೆ ರಜೆಯಲ್ಲಿ ಊರುಗಳಿಗೆ ಹೋಗಿ ಹಳ್ಳಿಯ ಸೊಗಡಿನ ಆಟಗಳನ್ನು ಆಡುವುದು ಕಡಿಮೆಯಾಗುತ್ತಿದೆ. ನಗರ ಪ್ರದೇಶದ ಪೋಷಕರು ಸುರಕ್ಷತೆಯ ದೃಷ್ಟಿಯಿಂದ ಮಕ್ಕಳನ್ನು ಮನೆಯಿಂದ ಹೊರಗೆ ಕಳುಹಿಸಲು ಭಯಪಡುತ್ತಿದ್ದಾರೆ,” ಎಂದು ಕಳವಳ ವ್ಯಕ್ತಪಡಿಸಿದರು.
ಮಕ್ಕಳಲ್ಲಿ ಬಾಲ್ಯದಿಂದಲೇ ವಿವಿಧ ಕೌಶಲಗಳನ್ನು ಬೆಳೆಸಲು ಮತ್ತು ಅವರು ರಜೆಯನ್ನು ಖುಷಿಯಾಗಿ ಕಳೆಯುವಂತೆ ಮಾಡಲು ಈ ಶಿಬಿರವನ್ನು ಆಯೋಜಿಸಲಾಗಿದೆ.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಆರ್.ಎಂ. ದಿನೇಶ್, ಕಾರ್ಯಕ್ರಮ ಸಂಯೋಜಕಿ ಪಿ.ಮಮತಾ, ಸಹಾಯಕಿ ಜಿ.ಎಸ್. ಶಿಲ್ಪಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


