ನವದೆಹಲಿ: ಕನಿಷ್ಠ ಬೆಂಬಲ ಬೆಲ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ತಮಿಳುನಾಡು ರೈತರು ಕೂಡ ಬೆಂಬಲ ಘೋಷಣೆ ಮಾಡಿದ್ದಾರೆ.
ಮಂಗಳವಾರ ಉಭಯ ರಾಜ್ಯಗಳ ನಡುವಿನ ಎರಡು ಗಡಿಗಳಲ್ಲಿ ಪ್ರತಿಭಟನಾಕಾರರು ಹರಿಯಾಣ ಪೊಲೀಸರೊಂದಿಗೆ ಮುಖಾಮುಖಿಯಾಗಿದ್ದರು. ಕೆಲವು ಪ್ರತಿಭಟನಾಕಾರರು ಬ್ಯಾರಿಕೇಡ್ ಗಳನ್ನು ಮುರಿದು ದೆಹಲಿ ಪ್ರವೇಶಕ್ಕೆ ಯತ್ನಿಸಿದರು. ಈ ವೇಳೆ ಪೊಲೀಸರು ಅಶ್ರುವಾಯು ಮತ್ತು ಜಲ ಫಿರಂಗಿಗಳನ್ನು ಬಳಸಿ ಅವರನ್ನು ನಿಯಂತ್ರಿಸುವ ಪ್ರಯತ್ನ ಮಾಡಿದರು.
ಇನ್ನು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವಾನ್ ಸಿಂಗ್ ಪಂಧೇರ್ ಈ ಬಗ್ಗೆ ಮಾತನಾಡಿದ್ದು, ಭದ್ರತಾ ಪಡೆಗಳ ಬೆದರಿಕೆಗೆ ನಾವು ಜಗ್ಗುವುದಿಲ್ಲ. ಕೇಂದ್ರ ನಮ್ಮ ಬೇಡಿಕೆಗಳನ್ನು ಒಪ್ಪುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಹೇಳಿದರು.


