ಬೆಂಗಳೂರು: ರಾಜ್ಯ ಸರ್ಕಾರವು ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸುವ ಮೊದಲು, ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ವಿಷಯದಲ್ಲಿ ಸರ್ಕಾರವು ಅನುಸರಿಸಲಿರುವ ಕಾರ್ಯವಿಧಾನದ ಬಗ್ಗೆ ಸ್ಪಷ್ಟನೆ ನೀಡಬೇಕು. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಎಲ್ಲಾ ಸಮುದಾಯಗಳೊಂದಿಗೆ ಸಮಾಲೋಚನೆ ನಡೆಸಿ ಒಮ್ಮತ ಮೂಡಿಸುವುದು ಅತ್ಯಗತ್ಯ ಎಂದು ಹೇಳಿದರು.
ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಸರ್ಕಾರವು ಗೊಂದಲದಲ್ಲಿದೆ. ಬಾಕಿ ಇರುವ ನೇಮಕಾತಿಗಳನ್ನು ಯಾವ ಆಧಾರದ ಮೇಲೆ ಮಾಡಲಾಗುತ್ತದೆ ಎಂಬ ಬಗ್ಗೆ ಸ್ಪಷ್ಟ ಮಾರ್ಗಸೂಚಿ ಬೇಕಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ಮುಂದೆ ಹಲವು ಸಮುದಾಯಗಳು ತಮ್ಮ ಅಹವಾಲುಗಳನ್ನು ಸಲ್ಲಿಸಿವೆ. ಆ ಶಿಫಾರಸುಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಬೇಕು ಅಂತಾ ಅವರು ಒತ್ತಾಯಿಸಿದರು.
ಒಳ ಮೀಸಲಾತಿ ಜಾರಿಗೆ ಕಾನೂನು ರೂಪಿಸಿರುವುದರಿಂದ ಸಹಜವಾಗಿಯೇ ಎಲ್ಲಾ ಸಮುದಾಯಗಳು ತಮ್ಮ ಪಾಲಿನ ಮೀಸಲಾತಿಗಾಗಿ ಬೇಡಿಕೆ ಇಡುತ್ತಿವೆ. ಈ ಸಮಸ್ಯೆಯನ್ನು ಸರಳೀಕರಿಸಲು ಕಾನೂನು ತಜ್ಞರ ಸಲಹೆ ಪಡೆಯುವುದು ಉತ್ತಮ ಎಂದು ಅವರು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಜಾಗತಿಕ ವಿದ್ಯಮಾನಗಳ ಬಗ್ಗೆಯೂ ಮಾತನಾಡಿದ ಬೊಮ್ಮಾಯಿ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಜಾಗತಿಕವಾಗಿ ತೈಲ ಬೆಲೆ ಮತ್ತು ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತಿದೆ. ಈ ಸಂಘರ್ಷದಿಂದ ಗಲ್ಫ್ ರಾಷ್ಟ್ರಗಳಲ್ಲಿರುವ ಭಾರತೀಯರಲ್ಲಿ ಆತಂಕ ಮನೆಮಾಡಿದೆ. ವಿಶ್ವ ನಾಯಕರು ತಕ್ಷಣ ಮಧ್ಯಪ್ರವೇಶಿಸಿ ಯುದ್ಧ ನಿಲ್ಲಿಸಬೇಕು ಎಂದು ಮನವಿ ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


