ತುಮಕೂರು: ಮಕ್ಕಳಲ್ಲಿರುವ ಪ್ರತಿಭೆಗಳು ಉತ್ತಮ ಭವಿಷ್ಯಕ್ಕೆ ಸಹಕಾರಿಯಾಗಲಿದ್ದು, ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರುವ ಕೆಲಸವಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿ ಆರ್.ಜಿ. ಪವಿತ್ರ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಬಾಲಭವನ ಹಾಗೂ ಶಾಲಾ ಶಿಕ್ಷಣ ಇಲಾಖೆಗಳ ಸಹಭಾಗಿತ್ವದಲ್ಲಿ ನಗರದ ಜಿಲ್ಲಾ ಬಾಲಭವನದಲ್ಲಿ “ಅಂತರ್ ಶಾಲಾ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಡಿ ಸೋಮವಾರ ಏರ್ಪಡಿಸಿದ್ದ ಜನಪದ ನೃತ್ಯ ಪ್ರದರ್ಶನ ಸ್ಪರ್ಧೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಾಲ್ಲೂಕು ಮಟ್ಟದಲ್ಲಿ ಕಿರಿಯ/ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮಕ್ಕಳಿಗಾಗಿ ಸಾಂಸ್ಕೃತಿಕ ಸ್ಪರ್ಧೆಯನ್ನು ಏರ್ಪಡಿಸಿ ಪ್ರಥಮ ಬಹುಮಾನ ಗಳಿಸಿದ ಮಕ್ಕಳಿಗಾಗಿ ಇಂದು ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರಲ್ಲದೆ, ಮಕ್ಕಳು ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಬೇಕು.
ಕನ್ನಡ ನಾಡಿನ ಜನಪದ ಕಲೆಗಳನ್ನು ಉಳಿಸಬೇಕು. ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮಹಿಳಾ ಸಾಂತ್ವಾನ ಕೇಂದ್ರದ ಸಮಾಜ ಕಾರ್ಯಕರ್ತೆ ಪಾರ್ವತಮ್ಮ ರಾಜ್ ಕುಮಾರ್ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಇಂತಹ ಸ್ಪರ್ಧೆಗಳನ್ನು ಆಯೋಜಿಸುವುದು ಬಹಳ ಮುಖ್ಯವಾಗಿರುತ್ತದೆ. ಈ ಸ್ಪರ್ಧೆಯಲ್ಲಿ ಹೆಚ್ಚಿನ ಮಕ್ಕಳು ಭಾಗವಹಿಸಿ ಇದರ ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು.
ತೀರ್ಪುಗಾರರಾಗಿ ಆಗಮಿಸಿದ್ದ ರಾಮನಗರ ಜಿಲ್ಲೆಯ ಜನಪದ ನೃತ್ಯಗಾರರಾದ ಅಜಯ್ ಮಾತನಾಡಿ, ಜನಪದ ಕಲಾ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕೋಲಾಟ, ವೀರಗಾಸೆ, ಪಟ ಕುಣಿತ, ಸುಗ್ಗಿ ಕುಣಿತ, ಗೊರವ ಕುಣಿತ, ಡೊಳ್ಳು ಕುಣಿತ, ಕಂಸಾಳೆ ಮತ್ತಿತರ ಜನಪದ ಪ್ರಕಾರಗಳ ಬಗ್ಗೆ ಮಾಹಿತಿ ನೀಡುತ್ತಾ, ಒಂದೊಂದು ಪ್ರಕಾರಗಳಿಗೂ ಅದರದೇ ಆದ ಮಹತ್ವವಿರುತ್ತದೆ ಎಂದು ತಿಳಿಸಿದರು.
ಜಿಲ್ಲಾ ಬಾಲಭವನ ಸಮಿತಿ ವ್ಯವಸ್ಥಾಪಕ ರಾಘವೇಂದ್ರ, ಮಂಡ್ಯ ಜಿಲ್ಲೆಯ ಜನಪದ ನೃತ್ಯಗಾರರಾದ ಕುಮಾರಿ ಅನುಷಾ, ಜಿಲ್ಲೆಯ ಎಲ್ಲಾ ತಾಲ್ಲೂಕಿನ ಜನಪದ ನೃತ್ಯ ಪ್ರದರ್ಶನ ಸ್ಪರ್ಧೆಯಲ್ಲಿ ಕಿರಿಯ/ ಹಿರಿಯ ಪ್ರಾಥಮಿಕ ಪಾಠಶಾಲೆಯ ಮತ್ತು ಪ್ರೌಢಶಾಲಾ ವಿಭಾಗದಿಂದ ಪ್ರಥಮ ಬಹುಮಾನ ಗಳಿಸಿದ ತಂಡದ ಮಕ್ಕಳು ಹಾಗೂ ಶಿಕ್ಷಕರು, ಶಿಶು ಅಭಿವೃದ್ಧಿ ಯೋಜನೆಗಳ ಮೇಲ್ವಿಚಾರಕರು ಹಾಜರಿದ್ದರು.
ಜಿಲ್ಲಾ ಬಾಲಭವನ ಸಮಿತಿ ಕಾರ್ಯಕ್ರಮ ಸಂಯೋಜಕಿ ಮಮತಾ ಪಿ. ಅವರು ವಂದನಾರ್ಪಣೆ ನೆರವೇರಿಸಿದರು. ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx