ಕುಣಿಗಲ್: ಕೃಷಿ ಕ್ಷೇತ್ರದಲ್ಲಿ ಸಮಗ್ರ ಹಾಗೂ ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಗಮನಾರ್ಹ ಸಾಧನೆ ಮಾಡಿರುವ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿ ವ್ಯಾಪ್ತಿಯ ಉಜ್ಜನಿ ಗ್ರಾಮದ ಕಾವ್ಯ ದಿನೇಶ್ ಅವರಿಗೆ ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಮಹಿಳೆ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಜಿಕೆವಿಕೆ ಆವರಣದಲ್ಲಿ ನಡೆದ ಕೃಷಿ ಮೇಳದಲ್ಲಿ ಕಾವ್ಯ ದಿನೇಶ್ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ಕಾವ್ಯ ದಿನೇಶ್ ಅವರು ತಮ್ಮ ಕೃಷಿ ಜಮೀನಿನಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸುತ್ತಿದ್ದು, ಏಲಕ್ಕಿ, ಕಾಳುಮೆಣಸು, ಕಾಫಿ, ಕೋಕೋ, ಬಾಳೆ, ತೆಂಗು, ಅಡಿಕೆ, ಕಿತ್ತಳೆ, ಆವಕಾಡೊ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳನ್ನು ಸಾವಯವ ಪದ್ಧತಿಯಲ್ಲಿ ಬೆಳೆಯುತ್ತಿದ್ದಾರೆ. ಜೊತೆಗೆ ಅರಣ್ಯ ಕೃಷಿ ಪದ್ಧತಿಯನ್ನೂ ಅಳವಡಿಸಿಕೊಂಡು ಕೃಷಿಯಲ್ಲಿ ವೈವಿಧ್ಯತೆ ಸಾಧಿಸಿದ್ದಾರೆ.
ಸಾಂಪ್ರದಾಯಿಕ ಕೃಷಿಯ ಜೊತೆಗೆ ಆಧುನಿಕ ಹಾಗೂ ಪರಿಸರ ಸ್ನೇಹಿ ಕೃಷಿ ಪದ್ಧತಿಗಳಿಗೆ ಆದ್ಯತೆ ನೀಡುವ ಮೂಲಕ ಕೃಷಿಯನ್ನು ಲಾಭದಾಯಕವಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇವರ ಕೃಷಿ ಸಾಧನೆ ತಾಲ್ಲೂಕಿನ ಇತರೆ ರೈತರಿಗೂ ಪ್ರೇರಣೆಯಾಗಿದ್ದು, ಯುವ ಮಹಿಳೆಯರು ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಮಾದರಿಯಾಗಿದ್ದಾರೆ.
ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಾವ್ಯ ದಿನೇಶ್ ಅವರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ಗ್ರಾಮಸ್ಥರು, ರೈತರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
