ಗುಬ್ಬಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ರೈಲ್ವೆ ಕ್ರಾಸಿಂಗ್ಗಳಲ್ಲಿ ಮೇಲ್ಸೇತುವೆ ಹಾಗೂ ಕೆಳಸೇತುವೆ ನಿರ್ಮಾಣಕ್ಕೆ ಆದ್ಯತೆ ನೀಡಿದ್ದು, ರಾಜ್ಯ ಸೇರಿದಂತೆ ದೇಶದ ವಿವಿಧೆಡೆ ನೂರಾರು ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.
ತಿಪಟೂರು, ಶಾರದಾನಗರ ಸೇರಿದಂತೆ ವಿವಿಧೆಡೆ ರೈಲ್ವೆ ಕಾಮಗಾರಿಗಳನ್ನು ವೀಕ್ಷಿಸಿದ ಬಳಿಕ ಗುಬ್ಬಿ ತಾಲ್ಲೂಕಿನ ನಿಟ್ಟೂರು–ಮೈಸೂರು ರಸ್ತೆ ಎಲ್.ಸಿ. 58ರ ಬದಲಾಗಿ ನಿರ್ಮಾಣವಾಗುತ್ತಿರುವ ರಸ್ತೆ ಮೇಲ್ಸೇತುವೆ (ಆರ್ಒಬಿ), ಎನ್. ನಂದಿಹಳ್ಳಿ ಎಲ್.ಸಿ. 59ರ ಬದಲಾಗಿ ಪ್ರಗತಿಯಲ್ಲಿರುವ ರಸ್ತೆ ಮೇಲ್ಸೇತುವೆ ಕಾಮಗಾರಿಗಳನ್ನು ವೀಕ್ಷಿಸಿದರು. ಬಳಿಕ ಗುಬ್ಬಿ ರೈಲ್ವೆ ಹಾಗೂ ಜಲಶಕ್ತಿ ಇಲಾಖೆಯ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದರು.
ದೇಶಾದ್ಯಂತ ಈಗಾಗಲೇ 700 ರಿಂದ 800 ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದ್ದು, ಈ ಪೈಕಿ 150ಕ್ಕೂ ಹೆಚ್ಚು ಕಾಮಗಾರಿಗಳು ಪ್ರಗತಿಯಲ್ಲಿವೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 27 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, 7 ರಿಂದ 8 ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿವೆ. ಉಳಿದ ಕಾಮಗಾರಿಗಳೂ ಪ್ರಗತಿಯಲ್ಲಿದ್ದು, ಡಿಸೆಂಬರ್ 2026ರೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಕೆಲವು ಕಾಮಗಾರಿಗಳು 15 ದಿನಗಳಷ್ಟು ಮುಂಚಿತವಾಗಿ ಅಥವಾ ತಡವಾಗಿ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಸ್ ಐಆರ್ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ
ಎಸ್ ಐಆರ್ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸೋಮಣ್ಣ, ಸುಳ್ಳನ್ನು ನೂರು ಬಾರಿ ಹೇಳಿದರೂ ಅದು ಸತ್ಯವಾಗುವುದಿಲ್ಲ. ಮತದಾರರ ಪಟ್ಟಿಯ ಪರಿಷ್ಕರಣೆ ವಿಚಾರದಲ್ಲಿ ಕಾಂಗ್ರೆಸ್ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.
ಮತದಾರರ ಪಟ್ಟಿಯಿಂದ ಮೃತಪಟ್ಟವರ ಹೆಸರು, ಒಂದಕ್ಕಿಂತ ಹೆಚ್ಚು ಕಡೆ ಹೆಸರು ಹೊಂದಿರುವವರು ಹಾಗೂ ಅನರ್ಹ ಮತದಾರರ ಹೆಸರುಗಳನ್ನು ನಿಯಮಾನುಸಾರ ತೆಗೆದುಹಾಕಬೇಕು. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಈ ವಿಚಾರದಲ್ಲಿ ರಾಜ್ಯದ ಮುಖ್ಯಮಂತ್ರಿಗಳೇ ಚುನಾವಣಾ ಆಯೋಗದ ಮುಂದೆ ಪ್ರತಿಭಟನೆ ನಡೆಸಿರುವುದು ಸರಿಯಲ್ಲ ಎಂದು ಟೀಕಿಸಿದರು.
ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿಯಿದ್ದರೂ ಸರ್ಕಾರ ಜನರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ರಾಜ್ಯದಲ್ಲಿ ಹಲವು ವಿಧಾನಸಭಾ ಹಾಗೂ ವಿಧಾನ ಪರಿಷತ್ ಚುನಾವಣೆಗಳು ನಡೆದಿದ್ದು, ಮುಂದಿನ ದಿನಗಳಲ್ಲಿಯೂ ಚುನಾವಣೆಗಳು ಎದುರಾಗಲಿವೆ. ಸರ್ಕಾರ ಜನಪರ ಕೆಲಸಗಳಿಗೆ ಆದ್ಯತೆ ನೀಡಬೇಕು. ಹಲವು ಬಾರಿ ಸಲಹೆ ನೀಡಿದರೂ ರಾಜ್ಯ ಸರ್ಕಾರ ತನ್ನ ಕಾರ್ಯವೈಖರಿಯನ್ನು ಸರಿಪಡಿಸಿಕೊಳ್ಳಲು ಮುಂದಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಆರತಿ ಬಿ., ದಿಶಾ ಸಮಿತಿ ಸದಸ್ಯ ವೈ.ಎಚ್. ಹುಚ್ಚಯ್ಯ, ರಾಜ್ಯ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ಬ್ಯಾಟರಂಗೇಗೌಡ, ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ, ಜಿಲ್ಲಾ ಉಪಾಧ್ಯಕ್ಷ ಪಂಚಾಕ್ಷರಿ, ಮಂಡಲ ಅಧ್ಯಕ್ಷ ಬಲರಾಮಣ್ಣ, ಮುಖಂಡರಾದ ಚಂದ್ರಶೇಖರ್ ಬಾಬು, ಎನ್.ಸಿ. ಪ್ರಕಾಶ್, ಎಸ್.ಡಿ. ದಿಲೀಪ್, ರೈಲ್ವೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
