ಕೆಲವೇ ಕೆಲವು ಭಯೋತ್ಪಾದಕರು ಕೇಂದ್ರಾಡಳಿತ ಪ್ರದೇಶದ ಜನರನ್ನು ಭಯಭೀತಗೊಳಿಸಲು ಸಾಧ್ಯವಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.
ಪೂಂಚ್ ಭಯೋತ್ಪಾದಕ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾದ ಕೆಲವು ದಿನಗಳ ನಂತರ ಮನೋಜ್ ಸಿನ್ಹಾ ಈ ಪ್ರತಿಕ್ರಿಯೆ ನೀಡಿದ್ದು, ಅರಾಜಕತಾವಾದಿಗಳ ವಿರುದ್ಧ ಒಗ್ಗಟ್ಟಾಗಿ ನಿಲ್ಲುವ ಸಮಯ ಬಂದಿದೆ. ಭಯೋತ್ಪಾದನೆ ನಿರ್ಮೂಲನೆಯಾಗಬೇಕು ಎಂದು ಅವರು ಕರೆ ನೀಡಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತ ವಾತಾವರಣಕ್ಕೆ ಭಂಗ ತರುವ ಪ್ರಯತ್ನಗಳು ನಡೆಯುತ್ತಿವೆ. ಕೇವಲ 20 ರಿಂದ 25 ಭಯೋತ್ಪಾದಕರು ಕಾಶ್ಮೀರಿಗಳನ್ನು ಭಯಭೀತಗೊಳಿಸಲು ಸಾಧ್ಯವಿಲ್ಲ. ಇಂತಹವರ ವಿರುದ್ಧ ಸಮಾಜ ಒಗ್ಗಟ್ಟಾಗಿ ನಿಲ್ಲಬೇಕಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಮತ್ತು ಅಭಿವೃದ್ಧಿಯನ್ನು ತರಲು ದೇಶವು ಸಂಕಲ್ಪ ಮಾಡಿದೆ. ಈ ಅರಾಜಕತಾವಾದಿಗಳ ವಿರುದ್ಧ ಒಟ್ಟಾಗಿ ನಿಲ್ಲುವ ಸಮಯ ಇದು’- ಜಮ್ಮುವಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಲೆಫ್ಟಿನೆಂಟ್ ಗವರ್ನರ್ ಹೇಳಿದ್ದಾರೆ.
ಭಯೋತ್ಪಾದನೆ ಮತ್ತು ಅದನ್ನು ಬೆಂಬಲಿಸುವ ಸಂಪೂರ್ಣ ಪರಿಸರ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ ಅವರು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಕೇಂದ್ರಾಡಳಿತ ಪ್ರದೇಶವು ಪ್ರಗತಿಯಲ್ಲಿದೆ ಎಂದು ಪ್ರತಿಪಾದಿಸಿದರು.


