ಚಿಕ್ಕನಾಯಕನಹಳ್ಳಿ: ಸಮಾಜದ ಉನ್ನತಿಗಾಗಿ ಶ್ರಮಿಸಿದ ಮಹಾನ್ ದಾರ್ಶನಿಕರನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸದೆ, ಎಲ್ಲರೂ ಒಂದೇ ಎಂಬ ಸಮಾನತೆಯ ಭಾವನೆಯೊಂದಿಗೆ ಸರ್ವದಾರ್ಶನಿಕರ ಜಯಂತಿಯನ್ನು ಒಂದೇ ವೇದಿಕೆಯಲ್ಲಿ ಆಚರಿಸುವ ವಿಶೇಷ ಕಾರ್ಯಕ್ರಮವನ್ನು ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಸಿ.ಬಿ. ಸುರೇಶ್‌ಬಾಬು ತಿಳಿಸಿದರು.
ಪಟ್ಟಣದ ಆಡಳಿತ ಸೌಧದಲ್ಲಿ ಸರ್ವದಾರ್ಶನಿಕರ ಜಯಂತ್ಯೋತ್ಸವದ ಕುರಿತು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಳೆದ ವರ್ಷದಿಂದ ಈ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಮಕ್ಕಳಿಗೆ ಶಿಕ್ಷಣದ ಮಹತ್ವ ತಿಳಿಸುವುದು, ಅವರಲ್ಲಿರುವ ಕೌಶಲ್ಯವನ್ನು ಗುರುತಿಸಿ ಸೂಕ್ತ ಉದ್ಯೋಗಾವಕಾಶ ಕಲ್ಪಿಸುವುದು, ಪರಿಸರ ಸಂರಕ್ಷಣೆಯ ಅರಿವು ಮೂಡಿಸಲು ಗಿಡಗಳನ್ನು ವಿತರಿಸುವುದು ಹಾಗೂ ಲ್ಯಾಪ್‌ಟಾಪ್‌ಗಳನ್ನು ನೀಡುವಂತಹ ಕಾರ್ಯಕ್ರಮಗಳ ಮೂಲಕ ಸಮ ಸಮಾಜ ನಿರ್ಮಾಣದ ಆಶಯವನ್ನು ಸಾಕಾರಗೊಳಿಸುವುದು ಇದರ ಉದ್ದೇಶವಾಗಿದೆ ಎಂದರು.
ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಎಲ್ಲಾ ಸಮುದಾಯಗಳ ಮುಖಂಡರ ಅಭಿಪ್ರಾಯದಂತೆ ಸರಳವಾಗಿ ಜಯಂತ್ಯೋತ್ಸವ ಆಚರಿಸಲು ನಿರ್ಧರಿಸಲಾಗಿದೆ. ದೇಶಕ್ಕೆ ಸಂವಿಧಾನ ಸಮರ್ಪಣೆಯಾದ ನವೆಂಬರ್ 26ರಂದು ಸಾಣೆಹಳ್ಳಿಯ ತರಳಬಾಳು ಜಗದ್ಗುರು ಬೃಹನ್ಮಠದ ಶಾಖೆಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ತಾಲ್ಲೂಕಿನ ಐದು ಮಠಗಳ ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಮೆರವಣಿಗೆಗೆ ಸಕಲ ಸಿದ್ಧತೆ
ಜಯಂತ್ಯೋತ್ಸವದ ಪೂರ್ವಭಾವಿಯಾಗಿ ಎಲ್ಲಾ ಸಮಾಜಗಳ ಅಧ್ಯಕ್ಷರ ಸಭೆ ನಡೆಸಿ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲಾಗಿದೆ. ವಿವಿಧ ಸಮುದಾಯಗಳ ವತಿಯಿಂದ ಅಲಂಕೃತ ಸ್ತಬ್ಧಚಿತ್ರಗಳನ್ನು ಸಿದ್ಧಪಡಿಸಿ, ಕಲಾತಂಡಗಳೊಂದಿಗೆ ದಾರ್ಶನಿಕರ ಭಾವಚಿತ್ರಗಳನ್ನು ಮೆರವಣಿಗೆಯಲ್ಲಿ ತರಲು ಸೂಚಿಸಲಾಗಿದೆ ಎಂದರು.
ನವೆಂಬರ್ 26ರಂದು ಬೆಳಿಗ್ಗೆ 8 ಗಂಟೆಗೆ ಪಟ್ಟಣದ ತಾಲ್ಲೂಕು ಆಡಳಿತ ಸೌಧದ ಮುಂಭಾಗದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮ ಆರಂಭವಾಗಲಿದೆ. ಬೆಳಿಗ್ಗೆ 8.30ಕ್ಕೆ ಕನ್ನಡ ಸಂಘದ ವೇದಿಕೆಯ ಮುಂಭಾಗದಿಂದ ಸರ್ವದಾರ್ಶನಿಕರ ಭಾವಚಿತ್ರಗಳ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ.
ಗೋಡೆಕೆರೆಯ ಶ್ರೀ ಮೃತ್ಯುಂಜಯ ಸ್ವಾಮೀಜಿ, ತಮ್ಮಡಿಹಳ್ಳಿ ಮಠದ ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಸ್ವಾಮೀಜಿ, ಕುಪ್ಪೂರು ಗದ್ದಿಗೆಮಠದ ಶ್ರೀ ತೇಜೇಶ್ವರ ಶಿವಾಚಾರ್ಯ ಸ್ವಾಮೀಜಿ, ಮಾದಿಹಳ್ಳಿ ಮಠದ ಶ್ರೀ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹಾಗೂ ಯಳನಡುವಿನ ಶ್ರೀ ಜ್ಞಾನಪ್ರಭು ಸಿದ್ದರಾಮೇಶ್ವರ ದೇಶಿಕೇಂದ್ರ ಸ್ವಾಮೀಜಿಗಳು ಮೆರವಣಿಗೆಯನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದ ವಿ.ಸೋಮಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಸಿ.ಬಿ.ಸುರೇಶ್‌ಬಾಬು ವಹಿಸಲಿದ್ದು, ತಾಲ್ಲೂಕಿನ ಮಾಜಿ ಶಾಸಕರು, ವಿವಿಧ ಸಮುದಾಯಗಳ ಅಧ್ಯಕ್ಷರು, ಮುಖಂಡರು ಹಾಗೂ ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ.
ತಾಲ್ಲೂಕಿನ ಎಲ್ಲ ಸಮುದಾಯಗಳ ಜನರು ಜಾತಿ-ಮತದ ಭೇದ ಮರೆತು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ವದಾರ್ಶನಿಕರ ಜಯಂತ್ಯೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಗ್ರೇಡ್-2 ತಹಸೀಲ್ದಾರ್ ಪ್ರಸಾದ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವರಾಜಯ್ಯ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
