ಕಲಬುರಗಿ: ಮುಂಬರುವ ಎಲ್ಲಾ ಚುನಾವಣೆಗಳನ್ನು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಜನತಾ ದಳ (ಜೆಡಿಎಸ್) ಪಕ್ಷಗಳು ಮೈತ್ರಿಯಾಗಿ ಒಟ್ಟಾಗಿ ಎದುರಿಸಲಿವೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಈಶಾನ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ನಿಮಿತ್ತ ಕಲಬುರಗಿಗೆ ಆಗಮಿಸಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಈ ಮಹತ್ವದ ಹೇಳಿಕೆ ನೀಡಿದರು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ಮುಂಬರುವ ದಿನಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಅವರು ತಿಳಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ ಯಡಿಯೂರಪ್ಪ, “ಮಕ್ಕಳ ಶೂ ಮತ್ತು ಸಾಕ್ಸ್ ಖರೀದಿಯಲ್ಲೂ ಭ್ರಷ್ಟಾಚಾರ ನಡೆದಿದೆ. ರಾಜ್ಯದಲ್ಲಿ ಹಲವಾರು ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಶಿಕ್ಷಕರು ಹಾಗೂ ಅಧ್ಯಾಪಕರಿಗೆ ಸರಿಯಾಗಿ ಸಂಬಳ ಬರುತ್ತಿಲ್ಲ” ಎಂದು ಆರೋಪಿಸಿದರು.
ರೈತರಿಗೆ ನೀಡುವುದಾಗಿ ಭರವಸೆ ನೀಡಿದ್ದ ಹಣವನ್ನು ಇದುವರೆಗೆ ಬಿಡುಗಡೆ ಮಾಡಿಲ್ಲ ಎಂದು ಟೀಕಿಸಿದ ಅವರು, “ಕಾಂಗ್ರೆಸ್ ನಾಯಕರು ಹಣದ ಬಲ ಹಾಗೂ ಜಾತಿ ರಾಜಕಾರಣದ ಮೂಲಕ ಚುನಾವಣೆ ಗೆಲ್ಲಲು ಮುಂದಾಗಿದ್ದಾರೆ. ಹೀಗಾಗಿ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರನ್ನು ಗೆಲ್ಲಿಸುವ ಮೂಲಕ ಜನತೆ ಸೂಕ್ತ ಉತ್ತರ ನೀಡಬೇಕು” ಎಂದು ಮನವಿ ಮಾಡಿದರು.
ಇದೇ ವೇಳೆ, ದೇಶದ ಹೆಮ್ಮೆಯ ಪೈಲಟ್‌ಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುವುದಾಗಿ ಯಡಿಯೂರಪ್ಪ ತಿಳಿಸಿದರು.
ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಬಂಡೆಪ್ಪ ಕಾಶಂಪುರ್, ವೆಂಕಟರಾವ್ ನಾಡಗೌಡ, ಶಾಸಕ ಎನ್. ರವಿಕುಮಾರ್ ಸೇರಿದಂತೆ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು. ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅಕ್ಟೋಬರ್ 6 ಕೊನೆಯ ದಿನವಾಗಿದ್ದು, ಅಕ್ಟೋಬರ್ 16 ರಂದು ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ ಮತ್ತು ಅಂದೇ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
