ರಾಮನಗರ: ರಾಜ್ಯದ ಕಾಂಗ್ರೆಸ್ ಸರ್ಕಾರವು ತನ್ನದೇ ಪಕ್ಷದ ಶಾಸಕರ ಫೋನ್ ಕರೆಗಳನ್ನು ಕದ್ದಾಲಿಕೆ ಮಾಡುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಿರುಗೇಟು ನೀಡಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಧ್ಯಮದವರು ಮೈಕ್ ಹಿಡಿಯುತ್ತಿದ್ದಂತೆ ಶಾಸಕರೇ ಎಲ್ಲವನ್ನೂ ಬಹಿರಂಗವಾಗಿ ಹೇಳುತ್ತಿರುವಾಗ, ಅವರ ಫೋನ್ ಕದ್ದಾಲಿಕೆ ಮಾಡುವ ಅಗತ್ಯವೇನಿದೆ?” ಎಂದು ಪ್ರಶ್ನಿಸಿದರು.
ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಿರುವ ಆರೋಪವಿತ್ತು. ಅಷ್ಟೇ ಅಲ್ಲದೆ, ಹಿಂದಿನ ಬಿಜೆಪಿ ಸರ್ಕಾರ ಮತ್ತು ಈಗಿನ ಕೇಂದ್ರ ಸರ್ಕಾರದ ವಿರುದ್ಧವೂ ಇಂತಹ ಆರೋಪಗಳಿವೆ ಎಂದು ರಾಮಲಿಂಗಾ ರೆಡ್ಡಿ ನೆನಪಿಸಿದರು.
ಸಾಮಾನ್ಯವಾಗಿ ಕ್ರಿಮಿನಲ್ ಗಳು, ಭಯೋತ್ಪಾದಕರು ಮತ್ತು ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗಿರುವವರ ಮೇಲೆ ನಿಗಾ ಇಡಲು ಕಾನೂನುಬದ್ಧವಾಗಿ ಫೋನ್ ಕದ್ದಾಲಿಕೆ ಮಾಡಲಾಗುತ್ತದೆ.
ನಮ್ಮ ಸರ್ಕಾರವು ಯಾರೊಬ್ಬರ ಫೋನ್ ಕರೆಯನ್ನೂ ಕದ್ದಾಲಿಕೆ ಮಾಡುತ್ತಿಲ್ಲ. ಕುಮಾರಸ್ವಾಮಿ ಅವರು ಮಾಡುತ್ತಿರುವ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ರಾಜ್ಯ ರಾಜಕಾರಣದಲ್ಲಿ ಫೋನ್ ಕದ್ದಾಲಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ಯುದ್ಧಕ್ಕೆ ಕಾರಣವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


