ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಅಥವಾ ಯಾವುದೇ ರೀತಿಯ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಶಾಸಕ ಆರ್.ವಿ. ದೇಶಪಾಂಡೆ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ ಪ್ರವಾಸದ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಸಿಎಂ ಮತ್ತು ಡಿಸಿಎಂ ದೆಹಲಿಗೆ ಹೋಗಿರುವುದು ರಾಜ್ಯಸಭೆ ಮತ್ತು ವಿಧಾನ ಪರಿಷತ್ (MLC) ಚುನಾವಣೆಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲು. ಇದರೊಂದಿಗೆ ಕೇಂದ್ರದ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿಯಾಗಲು ಅವರು ತೆರಳಿದ್ದಾರೆಯೇ ಹೊರತು ನಾಯಕತ್ವ ಬದಲಾವಣೆಗಲ್ಲ” ಎಂದು ಹೇಳಿದರು.
ಸರ್ಕಾರದ ದೆಹಲಿ ಪ್ರವಾಸವನ್ನು ಟೀಕಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ದೇಶಪಾಂಡೆ, “ಬಿಜೆಪಿ ಅಧಿಕಾರದಲ್ಲಿದ್ದಾಗ ಅವರ ಮಂತ್ರಿಗಳು ದೆಹಲಿಗೆ ಹೋಗುತ್ತಿರಲಿಲ್ಲವೇ? ವಿರೋಧ ಪಕ್ಷದವರು ಜವಾಬ್ದಾರಿಯಿಂದ ಟೀಕೆ ಮಾಡಬೇಕು. ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಯಾರೂ ಸುಮ್ಮನೆ ಮಾತಾಡಬಾರದು” ಎಂದು ಕಿಡಿಕಾರಿದರು.
ಮುಂದುವರಿದು ಮಾತನಾಡಿದ ಅವರು, “ಸಿಎಂ ಬದಲಾವಣೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ. ಶಾಸಕರಲ್ಲಿ ತಮ್ಮದೇ ಆದ ಅಭಿಪ್ರಾಯಗಳಿರಬಹುದು, ಆದರೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಇನ್ನು ಸಂಪುಟ ಪುನರ್ ರಚನೆ ಕುರಿತು ನನಗೆ ಮಾಹಿತಿ ಇಲ್ಲ. ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನಾನು 1983 ರಿಂದ ಶಾಸಕನಾಗಿದ್ದೇನೆ ಮತ್ತು 8 ಜನ ಮುಖ್ಯಮಂತ್ರಿಗಳ ಜೊತೆ ಕೆಲಸ ಮಾಡಿದ್ದೇನೆ. ನನ್ನ ದೃಷ್ಟಿಯಲ್ಲಿ ಸಿಎಂ ಬದಲಾವಣೆಯ ಯಾವುದೇ ವಿಷಯವೇ ಇಲ್ಲ” ಎಂದು ದೇಶಪಾಂಡೆ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


