ತಿಪಟೂರು: ನಗರದ ತಾಲ್ಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಅವರ 119ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಕೆ. ಷಡಕ್ಷರಿ ಅವರು, “ಬಾಬು ಜಗಜೀವನರಾಂ ಅವರು ಅಲ್ಪಸಂಖ್ಯಾತರು ಹಾಗೂ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದ ಧೀಮಂತ ನಾಯಕ. ಬಾಬೂಜಿಯವರು ಬಾಲ್ಯದಲ್ಲಿಯೇ ಅನ್ಯಾಯ, ಶೋಷಣೆ ಮತ್ತು ಅಸಮಾನತೆಯ ವಿರುದ್ಧ ಧ್ವನಿ ಎತ್ತುವ ಗುಣವನ್ನು ಮೈಗೂಡಿಸಿಕೊಂಡಿದ್ದರು. ಜಾತಿ ತಾರತಮ್ಯವನ್ನು ಹೋಗಲಾಡಿಸಿ ಶೋಷಿತರ ಬದುಕಿನಲ್ಲಿ ಬೆಳಕು ಮೂಡಿಸಲು ಅವರು ನಡೆಸಿದ ಹೋರಾಟ ಅವಿಸ್ಮರಣೀಯ,” ಎಂದು ಬಣ್ಣಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್ ವಿಪಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್.ರೇಣುಕಯ್ಯ ಮಾತನಾಡಿ, “ಭಾರತದ ಭವಿಷ್ಯವನ್ನು ರೂಪಿಸುವಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಅವರ ಕೊಡುಗೆ ಅಪಾರ. ತಮ್ಮ ಕುಲದ ಬಗ್ಗೆ ಅವಹೇಳನ ಮಾಡಿದವರಿಗೆ ಸ್ವಾಭಿಮಾನದ ಮೂಲಕವೇ ಅವರು ಪ್ರತ್ಯುತ್ತರ ನೀಡಿದ್ದರು. ಸರ್ಕಾರದ ಶುಲ್ಕ ವಿನಾಯಿತಿಯನ್ನು ತಿರಸ್ಕರಿಸಿ, ಸ್ವಪ್ರಯತ್ನದಿಂದ ಶಿಕ್ಷಣ ಪಡೆದು ದೇಶದ ರಾಜಕೀಯ ರಂಗದಲ್ಲಿ ಉನ್ನತ ಸ್ಥಾನಕ್ಕೇರಿದವರು ಅವರು,” ಎಂದು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ, ತಹಶೀಲ್ದಾರ್ ಮೋಹನ್‌ಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಎಂ. ಸುದರ್ಶನ್, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಜಲಜಾಕ್ಷಮ್ಮ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


