ತಿಪಟೂರು: ತಾಲೂಕಿನಾದ್ಯಂತ ಕುಡಿಯುವ ನೀರು ಮತ್ತು ಅಸಮರ್ಪಕ ವಿದ್ಯುತ್ ಸರಬರಾಜಿನಿಂದಾಗಿ ಜನ ಹಾಗೂ ಜಾನುವಾರುಗಳಿಗೆ ನೀರು-ಮೇವಿಗೆ ತೀವ್ರ ಅಭಾವ ಉಂಟಾಗಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ಸರ್ಕಾರಿ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅಶ್ವತ್ ನಾರಾಯಣ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಣ್ಣಪುಟ್ಟ ಕೆಲಸಗಳಿಗೂ ಜನರು ಸರ್ಕಾರಿ ಕಚೇರಿಗಳಿಗೆ ಐದಾರು ಬಾರಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ತಮ್ಮ ಅಳಲನ್ನು ನಮೊಂದಿಗೆ ತೋಡಿಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ತಾಲೂಕಿನ 26 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮನೆ ಹಾಗೂ ಕಿರಾಣಿ ಅಂಗಡಿಗಳಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಹೊನ್ನವಳ್ಳಿ ಹೋಬಳಿಯೊಂದರಲ್ಲೇ ಕಳೆದ ಒಂದು ತಿಂಗಳ ಅವಧಿಯಲ್ಲಿ ಒಂದೇ ಮನೆಯ ಮೂವರು ಮದ್ಯವ್ಯಸನಕ್ಕೆ ಬಲಿಯಾಗಿದ್ದಾರೆ. ಅಧಿಕಾರಿಗಳು ಇದನ್ನು ತಡೆಯಲು ಯಾವುದೇ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ತಾಲೂಕಿನ 225 ಶಾಲೆಗಳಿಗೆ ಉಚಿತ ನೋಟ್‌ಬುಕ್ ವಿತರಣೆ ಕಾರ್ಯಕ್ರಮಕ್ಕೆ ತೆರಳಿದ್ದ ಸಂದರ್ಭದಲ್ಲಿ, ಹಲವು ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಹಾಗೂ ಕುಡಿಯುವ ನೀರಿನ ಕೊರತೆ ಇರುವುದು ಕಂಡುಬಂದಿದೆ. ಸಂಬಂಧಪಟ್ಟ ಇಲಾಖೆ ತಕ್ಷಣವೇ ಈ ಸಮಸ್ಯೆಗಳನ್ನು ಬಗೆಹರಿಸಬೇಕು. ನಗರ ಪ್ರದೇಶದಲ್ಲಿಯೂ ನೀರಿನ ಕೊರತೆ ದಿನೇ ದಿನೇ ಹೆಚ್ಚುತ್ತಿದ್ದು, ನಗರಾಡಳಿತ ತಕ್ಷಣವೇ ಎಚ್ಚೆತ್ತುಕೊಳ್ಳದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ತಾಲೂಕಿನಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ರೈತರು ರಾಗಿ ಬಿತ್ತನೆ ಮಾಡಲು ಸಹ ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ. ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ. ಮೇವು ಬೆಳೆಯಲು ಅಗತ್ಯವಿರುವ ವಿದ್ಯುತ್ತನ್ನು ಬೆಸ್ಕಾಂ ಸಮರ್ಪಕವಾಗಿ ನೀಡುತ್ತಿಲ್ಲ. ತಕ್ಷಣವೇ ರೈತರಿಗೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು. ತಾಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರನ್ನು ಅಲೆದಾಡಿಸದೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಒತ್ತಾಯಿಸಿದರು.
ಗ್ರಾಮೀಣ ಪ್ರದೇಶಗಳ ದಿನಸಿ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿರುವುದರಿಂದ ಗ್ರಾಮದ ಅನೇಕ ಯುವಕರು ದುರಭ್ಯಾಸಕ್ಕೆ ಬಲಿಯಾಗುತ್ತಿದ್ದಾರೆ. ಸಂಬಂಧಪಟ್ಟ ಇಲಾಖಾಧಿಕಾರಿಗಳು ತಕ್ಷಣವೇ ಜಾಗೃತರಾಗಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಕರುಡಾಳು ಹರೀಶ್ ಆಗ್ರಹಿಸಿದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
