ತಿಪಟೂರು: ನಗರದಲ್ಲಿ ತಲೆದೋರಿರುವ ತೀವ್ರ ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸದಿದ್ದರೆ ನಗರಸಭೆಯ ಮುಂದೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ಎಚ್ಚರಿಸಿದ್ದಾರೆ.
ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕುಡಿಯುವ ನೀರಿನ ವ್ಯವಸ್ಥೆ ಮಾಡುವಲ್ಲಿ ತಾಲ್ಲೂಕು ಆಡಳಿತ ಮತ್ತು ಶಾಸಕರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಈ ಹಿಂದೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ನಗರಸಭೆ ಆಯುಕ್ತರು ನಗರಕ್ಕೆ 62 ಹೊಸ ಕೊಳವೆಬಾವಿಗಳನ್ನು ಕೊರೆಸಲಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಈ ಕೊಳವೆಬಾವಿಗಳು ಎಲ್ಲಿವೆ ಎಂಬ ಬಗ್ಗೆ ಸಾರ್ವಜನಿಕರಿಗೆ ಯಾವುದೇ ಮಾಹಿತಿ ಇಲ್ಲ ಎಂದರು.
ನಗರಕ್ಕೆ 24 ಗಂಟೆ ಶಾಶ್ವತ ಕುಡಿಯುವ ನೀರಿನ ಯೋಜನೆಗಾಗಿ ಸುಮಾರು 72 ಸಾವಿರ ಕೋಟಿ ರೂ. (ವರದಿಯಂತೆ) ವೆಚ್ಚದಲ್ಲಿ ಅಳವಡಿಸಲಾದ ಪೈಪುಗಳು ಬಳಕೆಯಿಲ್ಲದೆ ತುಕ್ಕು ಹಿಡಿಯುತ್ತಿವೆ. ಇದರಿಂದ ಸರ್ಕಾರದ ಹಣ ಪೋಲಾಗುತ್ತಿದೆ ಎಂದು ಕಿಡಿಕಾರಿದರು. ನಗರದ ಗೋವಿನಪುರ ರಸ್ತೆಯು ಅತ್ಯಂತ ಕೆಟ್ಟದಾಗಿದ್ದು, ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿ ಹಲವು ತಿಂಗಳು ಕಳೆದರೂ ಕೆಲಸ ಆರಂಭವಾಗಿಲ್ಲ ಎಂದರು.
ಪ್ರತಿದಿನ ವಾಹನ ಸವಾರರು ಬಿದ್ದು ಗಾಯ ಮಾಡಿಕೊಳ್ಳುತ್ತಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಕೂಡಲೇ ರಸ್ತೆ ದುರಸ್ತಿ ಮಾಡಬೇಕೆಂದು ಅವರು ಆಗ್ರಹಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಸ್ವಾಮಿ ನಗರಾಧ್ಯಕ್ಷರಾಜು, ತಾಲೂಕು ಕಾರ್ಯದರ್ಶಿ ನಟರಾಜ್, ಜೆಡಿಎಸ್ ಮುಖಂಡರಾದ ಸುದರ್ಶನ್, ಸಂತೋಷ್ ಹಾಗೂ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


