ತಿಪಟೂರು: ಬಸವಣ್ಣನವರ ಕುರಿತು ತಪ್ಪು ಹಾಗೂ ಆಕ್ಷೇಪಾರ್ಹ ಮಾಹಿತಿಗಳನ್ನು ಒಳಗೊಂಡಿದೆ ಎನ್ನಲಾದ ರವಿ ಹಂಜ್ ಅವರ ‘ಬಸವ ಮಂಟಪ’ ಪುಸ್ತಕವನ್ನು ಕಾನೂನುಬದ್ಧವಾಗಿ ಮುಟ್ಟುಗೋಲು ಹಾಕಿಕೊಳ್ಳಬೇಕು ಮತ್ತು ಲೇಖಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಶಿಕ್ಷೆ ವಿಧಿಸಬೇಕು ಎಂದು ತಿಪಟೂರಿನ ವಿವಿಧ ಮಠಾಧೀಶರು ಹಾಗೂ ವೀರಶೈವ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.
ತಿಪಟೂರು ನಗರದ ಕಂಚಘಟ್ಟದಲ್ಲಿರುವ ಶ್ರೀ ರುದ್ರಮುನಿ ಮಹಾಸ್ವಾಮಿಗಳ ಮಠದಲ್ಲಿ ವಿವಿಧ ಮಠಾಧೀಶರು ಮತ್ತು ವೀರಶೈವ ಸಂಘಟನೆಗಳ ವತಿಯಿಂದ ಆಯೋಜಿಸಲಾಗಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ಆಗ್ರಹ ವ್ಯಕ್ತವಾಯಿತು.
ಬಸವಣ್ಣನವರ ವಿಚಾರಧಾರೆ, ತತ್ವಾದರ್ಶಗಳು ಹಾಗೂ ಸಮಾಜ ಸುಧಾರಣೆಯ ಕೊಡುಗೆಗಳನ್ನು ತಪ್ಪಾಗಿ ಚಿತ್ರಿಸುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಮಠಾಧೀಶರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ವಿವಾದಿತ ‘ಬಸವ ಮಂಟಪ’ ಕೃತಿಯನ್ನು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಪರಿಶೀಲಿಸಿ, ಕಾನೂನು ಪ್ರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಮತ್ತು ಲೇಖಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.
ಬಸವಣ್ಣನವರ ತತ್ವ, ಸಿದ್ಧಾಂತ ಹಾಗೂ ಸಾಮಾಜಿಕ ಸಮಾನತೆಯ ಸಂದೇಶಕ್ಕೆ ಧಕ್ಕೆ ಉಂಟಾಗದಂತೆ ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಸಂಘಟನೆಗಳ ಪ್ರತಿನಿಧಿಗಳು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಂಚಘಟ್ಟ ಮಠದ ಶ್ರೀ ರುದ್ರಮುನಿ ಮಹಾಸ್ವಾಮೀಜಿಗಳು, ತಮ್ಮಡಿಹಳ್ಳಿ ಮಠದ ಶ್ರೀ ಅಭಿನವ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಹಾಗೂ ಅರಸೀಕೆರೆ ತಾಲೂಕಿನ ದೊಡ್ಡಮೇಟಿಕುರ್ಕೆ ವಿರಕ್ತ ಮಠದ ಶ್ರೀ ಶಶಿಶೇಖರ ಮಹಾಸ್ವಾಮಿಗಳು ಸೇರಿದಂತೆ ವಿವಿಧ ವೀರಶೈವ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
