ತಿಪಟೂರು: ತಾಲೂಕಿನ ನೊಣವಿನಕೆರೆ ಹೋಬಳಿಯ ಮಾಟನಹಳ್ಳಿ ಗ್ರಾಮದಲ್ಲಿ ಭಾನುವಾರ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಎರಡು ಮನೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ಮಾಟನಹಳ್ಳಿ ಗ್ರಾಮದ ವೆಂಕಟರಮಣಗೌಡ ಹಾಗೂ ಸಣ್ಣತಿಮ್ಮೇಗೌಡ ಎಂಬುವವರಿಗೆ ಸೇರಿದ ಮನೆಗಳಲ್ಲಿ ಭಾರತ್ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಬೆಂಕಿ ಆವರಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಮನೆಗಳು ಬೆಂಕಿಗಾಹುತಿಯಾಗಿವೆ.
ಈ ದುರ್ಘಟನೆಯಲ್ಲಿ ಮನೆಯಲ್ಲಿದ್ದ ಸುಮಾರು 15 ಸಾವಿರ ಕೊಬ್ಬರಿ ಉಂಡೆಗಳು, ಲಕ್ಷಾಂತರ ರೂಪಾಯಿ ನಗದು, ಚಿನ್ನಾಭರಣ, ಧಾನ್ಯಗಳು ಹಾಗೂ ಗೃಹೋಪಯೋಗಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ರೈತರು ಕಷ್ಟಪಟ್ಟು ಸಂಪಾದಿಸಿದ್ದ ಆಸ್ತಿಪಾಸ್ತಿಗಳು ಕಣ್ಣೆದುರೇ ನಾಶವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಗ್ರಾಮಸ್ಥರು ನಂದಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಈ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


