ತುಮಕೂರು : ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರ ನೇತೃತ್ವದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ಸಾಮೂಹಿಕವಾಗಿ ಓದುವ ಮೂಲಕ ಸಂವಿಧಾನದ ಆಶಯಗಳನ್ನು ಗೌರವಿಸಿ, ಅದರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪ ಕೈಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಭಾರತದ ಸಂವಿಧಾನವು ದೇಶದ ಆಡಳಿತ ವ್ಯವಸ್ಥೆಗೆ ಮಾರ್ಗದರ್ಶಕವಾಗಿದ್ದು, ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಭ್ರಾತೃತ್ವದ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ. ಪ್ರತಿಯೊಬ್ಬ ನಾಗರಿಕರೂ ಸಂವಿಧಾನದ ಆಶಯಗಳನ್ನು ಅರಿತುಕೊಂಡು, ಸಂವಿಧಾನಿಕ ಮೌಲ್ಯಗಳಿಗೆ ಬದ್ಧರಾಗಿ ನಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವುದು ಪ್ರಮುಖ ಜವಾಬ್ದಾರಿಯಾಗಿದೆ. ಆಡಳಿತದಲ್ಲಿ ಪಾರದರ್ಶಕತೆ, ಸಮಾನತೆ ಹಾಗೂ ನ್ಯಾಯಸಮ್ಮತತೆಗೆ ಆದ್ಯತೆ ನೀಡಿ, ಜನಸಾಮಾನ್ಯರ ಹಕ್ಕುಗಳನ್ನು ಗೌರವಿಸುವ ಮೂಲಕ ಜವಾಬ್ದಾರಿಯುತ ಆಡಳಿತ ನೀಡಬೇಕು ಎಂದು ಹೇಳಿದರು.
ಸಂವಿಧಾನವು ನಾಗರಿಕರಿಗೆ ಹಕ್ಕುಗಳನ್ನು ನೀಡುವುದರ ಜೊತೆಗೆ ದೇಶದ ಏಕತೆ, ಸಮಗ್ರತೆ ಮತ್ತು ಸಾಮಾಜಿಕ ಸೌಹಾರ್ದತೆಯನ್ನು ಕಾಪಾಡುವ ಕರ್ತವ್ಯಗಳನ್ನೂ ತಿಳಿಸಿದೆ. ಸಂವಿಧಾನದ ಆಶಯಗಳನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ ದೈನಂದಿನ ಜೀವನ ಹಾಗೂ ಆಡಳಿತದಲ್ಲಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ಒತ್ತಿಹೇಳಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ, ಮಹಾ ನಗರ ಪಾಲಿಕೆ ಆಯುಕ್ತರು, ಅಪರ ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
