ತುಮಕೂರು: ಜಿಲ್ಲೆಯಲ್ಲಿ ತೀವ್ರ ಬೇಸಿಗೆಯ ಬಿಸಿ ಏರುತ್ತಿರುವ ಹಿನ್ನೆಲೆಯಲ್ಲಿ, ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ 100 ಹಳ್ಳಿಗಳಿಗೆ ತಕ್ಷಣವೇ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ನಗರದ ಸ್ಮಾರ್ಟ್ ಸಿಟಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಪಾವಗಡ ಹೊರತುಪಡಿಸಿ ಜಿಲ್ಲೆಯ ಉಳಿದ ಎಲ್ಲಾ ತಾಲೂಕುಗಳಲ್ಲಿ ನೀರಿನ ಸಮಸ್ಯೆ ಎದುರಾಗಬಹುದಾದ 100 ಹಳ್ಳಿಗಳನ್ನು ಪಟ್ಟಿ ಮಾಡಲಾಗಿದೆ. ಈ ಹಳ್ಳಿಗಳಿಗೆ ಈಗಾಗಲೇ ಟ್ಯಾಂಕರ್ ಮೂಲಕ ಮತ್ತು ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆಗೆ ಪಡೆಯುವ ಮೂಲಕ ನೀರು ಸರಬರಾಜು ಮಾಡಲು ಕ್ರಮ ವಹಿಸಲಾಗಿದೆ ಎಂದರು.
ಟ್ಯಾಂಕರ್ ಅಥವಾ ಖಾಸಗಿ ಮೂಲಗಳಿಂದ ನೀರು ಸಿಗದಿದ್ದಲ್ಲಿ, ತುರ್ತಾಗಿ ಹೊಸ ಬೋರ್ ವೆಲ್ ಕೊರೆಯಲು ಅಧಿಕಾರಿಗಳಿಗೆ ಅನುಮತಿ ನೀಡಲಾಗಿದೆ. ಬೋರ್ ವೆಲ್ ಕೊರೆಸಲು ಬೇಕಾದ ಅನುಮತಿಯನ್ನು ಜಿಲ್ಲಾಧಿಕಾರಿ ಅಥವಾ ಜಿಪಂ ಸಿಇಒ ಅವರು ವಿಳಂಬವಿಲ್ಲದೆ ನೀಡಬೇಕು ಹಾಗೂ ಬೆಸ್ಕಾಂ ತಕ್ಷಣವೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಸೂಚಿಸಿದರು.
ತುಮಕೂರು ನಗರದ ಕುಡಿಯುವ ನೀರಿನ ಅಗತ್ಯಕ್ಕಾಗಿ ಹೇಮಾವತಿ ಜಲಾಶಯದಿಂದ ಕನಿಷ್ಠ 2 ಟಿಎಂಸಿ ನೀರು ಹರಿಸುವಂತೆ ಹಾಸನ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಲಾಗಿದೆ. ಶೀಘ್ರದಲ್ಲೇ ಈ ಕುರಿತು ಸರ್ಕಾರಕ್ಕೆ ಅಧಿಕೃತ ಮನವಿ ಸಲ್ಲಿಸಲಾಗುವುದು. ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಕನಿಷ್ಠ ಎರಡು ದಿನಕ್ಕೊಮ್ಮೆಯಾದರೂ ಸಾರ್ವಜನಿಕರಿಗೆ ನೀರು ಪೂರೈಸುವಂತೆ ಸ್ಥಳೀಯ ಸಂಸ್ಥೆಗಳಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.
ಬೇಸಿಗೆಯಿಂದ ತೋಟಗಾರಿಕೆ ಬೆಳೆಗಳು ಒಣಗುತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ ಸಚಿವರು, “ಸರ್ಕಾರ ಯಾವಾಗಲೂ ರೈತರ ಪರವಾಗಿದೆ. ಬೆಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು, ರೈತರು ಆತಂಕಕ್ಕೆ ಒಳಗಾಗಬಾರದು” ಎಂದು ಧೈರ್ಯ ತುಂಬಿದರು.
ಇದೇ ಸಂದರ್ಭದಲ್ಲಿ ಶಿರಾ ತಾಲೂಕಿನಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮತ್ತು 1,800 ಮನೆಗಳ ಹಂಚಿಕೆಯನ್ನು ಶೀಘ್ರದಲ್ಲೇ ಮಾಡಲಾಗುವುದು ಎಂದು ಭರವಸೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮತ್ತು ಜಿಪಂ ಸಿಇಒ ಬಿ.ವಿ. ಅಶ್ವಿಜ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


