ತುಮಕೂರು: ತುಮಕೂರು ದಸರಾ ಪ್ರಯುಕ್ತ ನಗರದ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 6ರಂದು ಬೆಳಿಗ್ಗೆ 10 ಗಂಟೆಗೆ ಮಹಿಳಾ ಮತ್ತು ಮಕ್ಕಳ ದಸರಾ ಕಾರ್ಯಕ್ರಮ ಜರುಗಲಿದ್ದು, ಆಕರ್ಷಕ ಕ್ರೀಡೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಅಂದು ಸಂಜೆ 5 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಡೆಯಲಿರುವ ಯುವ ಸಂಭ್ರಮದಲ್ಲಿ ಜಿಲ್ಲೆಯ ಪ್ರತಿಷ್ಠಿತ ಕಲಾವಿದರು ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಲಾ ಪ್ರದರ್ಶನ ಮತ್ತು ಆಹಾರ ಮೇಳವನ್ನು ಏರ್ಪಡಿಸಲಾಗಿದೆ.
ನಂತರ ಸಂಜೆ 7 ಗಂಟೆಗೆ ನಗರದ ಡಾ.ಬಾಲ ಗಂಗಾಧರನಾಥ ಸ್ವಾಮೀಜಿ ವೃತ್ತದಲ್ಲಿ ದಸರಾ ವಿಶೇಷ ದೀಪಾಲಂಕಾರ ವೈಭವಕ್ಕೆ ಚಾಲನೆ ನೀಡಲಾಗುವುದು.
ನಗರದ ಅಮಾನಿಕೆರೆಯಲ್ಲಿ ಸಂಜೆ 4 ಗಂಟೆಗೆ ಬೋಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ಬಳಿಕ 4:30 ಗಂಟೆಗೆ ಟೌನ್ಹಾಲ್ ವೃತ್ತದಿಂದ ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೂ ನಡೆಯಲಿರುವ ಮೆರವಣಿಗೆಯಲ್ಲಿ ಆನೆಗಳ ಮೆರವಣಿಗೆ ತಾಲೀಮು, ಭಾರತೀಯ ಸಾಂಪ್ರದಾಯಿಕ ಉಡುಗೆ–ತೊಡುಗೆಗಳೊಂದಿಗೆ ಸುಮಾರು 1200ಕ್ಕೂ ಹೆಚ್ಚು ಯುವಕ-ಯುವತಿಯರು ಹಾಗೂ ವಿವಿಧ ಜನಪದ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ.
ಉಸ್ತುವಾರಿ ಸಚಿವರಿಂದ ಯುವ ದಸರಾ ಉದ್ಘಾಟನೆ :
ತುಮಕೂರು ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 6 ರಿಂದ 10ರವರೆಗೆ ಪ್ರತಿ ದಿನ ಸಂಜೆ 5 ಗಂಟೆಗೆ ಹಮ್ಮಿಕೊಂಡಿರುವ ಯುವ ದಸರಾ ಕಾರ್ಯಕ್ರಮವನ್ನು ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಿರ್ಮಿಸಿರುವ ಹಾಸ್ಯ ಚಕ್ರವರ್ತಿ ಟಿ.ಆರ್. ನರಸಿಂಹರಾಜು ವೇದಿಕೆಯಲ್ಲಿ ಏರ್ಪಡಿಸಲಾಗಿದೆ.
ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 6ರ ಸಂಜೆ 5 ಗಂಟೆಗೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಉದ್ಘಾಟಿಸಲಿದ್ದು, ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ವಹಿಸಲಿದ್ದು, ಟಿ.ಎಸ್. ಸಾಗರ್ ಮತ್ತು ತಂಡದಿಂದ ಭರತನಾಟ್ಯ, ಎಲ್. ಮಂಜಣ್ಣ ಮತ್ತು ತಂಡದಿಂದ ಸುಗಮ ಸಂಗೀತ, ಗುಬ್ಬಿ ತಾಲ್ಲೂಕು ಅಂಕಸಂದ್ರ ಗ್ರಾಮದ ಸರ್ಕಾರಿ ಸಂಯುಕ್ತ ಪ್ರೌಢ ಶಾಲೆ ಹಾಗೂ ಚೇಳೂರಿನ ಜ್ಞಾನಜ್ಯೋತಿ ರಾಷ್ಟ್ರೀಯ ವಿದ್ಯಾಲಯದ ವಿದ್ಯಾರ್ಥಿಗಳಿಂದ ಶಿಶುನಾಳ ಶರೀಫರ ತತ್ವಪದ ಹಾಗೂ ಜನಪದ ಲೋಕ ಕಾರ್ಯಕ್ರಮ, ತುಮಕೂರಿನ ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಸಮೂಹ ನೃತ್ಯ, ಕರ್ನಾಟಕ ರಾಜ್ಯ ಕಲಾವಿದರ ಒಕ್ಕೂಟದಿಂದ ಸೋಬಾನೆ ಪದ, ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜು ವಿದ್ಯಾರ್ಥಿಗಳಿಂದ ಕಂಸಾಳೆ ಮತ್ತು ಕೋಲಾಟ ಕಲಾ ಪ್ರದರ್ಶನ, ವನ್ಯ ಜೀವಿ ಛಾಯಾಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು/ಪದಾಧಿಕಾರಿಗಳು, ಕಲಾವಿದರು, ಸಾಹಿತಿಗಳು, ಕಲಾಭಿಮಾನಿಗಳು, ಅಧಿಕಾರಿ/ಸಿಬ್ಬಂದಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದಸರಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q