ತುಮಕೂರು: ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಹಟ್ಟಿ ಮತ್ತು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಸುಮಾರು 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಡಾ.ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ವಿವಿಧ ತಾಂಡಾ ಮತ್ತು ಹಟ್ಟಿಗಳ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರಗಳನ್ನು ವಿತರಿಸಲಾಗುವುದು. ಜಿಲ್ಲಾ ಪಂಚಾಯಿತಿ ವತಿಯಿಂದ ನಿವೇಶನ ರಹಿತರಿಗೆ 20 ಸಾವಿರ ನಿವೇಶನಗಳನ್ನು ನೀಡಲು ಪ್ರಯತ್ನ ನಡೆಯುತ್ತಿದ್ದು, ಇದನ್ನು ಗ್ರಾಮ ಪಂಚಾಯಿತಿಗಳ ಮೂಲಕ ವಿತರಿಸಲಾಗುವುದು ಎಂದು ಜಿ.ಪಂ ಸಿಇಒ ಬಿ.ವಿ. ಅಶ್ವಿಜ ಮಾಹಿತಿ ನೀಡಿದರು.
1971ರ ಭಾರತ–ಪಾಕಿಸ್ತಾನ ಯುದ್ಧದ ಸಮಯದಲ್ಲಿ ರಕ್ಷಣಾ ಸಚಿವರಾಗಿ ಡಾ. ಬಾಬು ಜಗಜೀವನ್ ರಾಮ್ ಅವರು ತೆಗೆದುಕೊಂಡ ದಿಟ್ಟ ನಿರ್ಧಾರಗಳು ಮತ್ತು ಕೃಷಿ ಸಚಿವರಾಗಿ ಹಸಿರು ಕ್ರಾಂತಿಗೆ ಅವರು ನೀಡಿದ ಕೊಡುಗೆಯನ್ನು ಜಿಲ್ಲಾಧಿಕಾರಿಗಳು ಸ್ಮರಿಸಿದರು.
ಬಾಬು ಜಗಜೀವನ್ ರಾಮ್ ಅವರು ಬಾಲ್ಯದಿಂದಲೇ ಅಸ್ಪೃಶ್ಯತೆ ಮತ್ತು ಜಾತೀಯತೆ ವಿರುದ್ಧ ಧ್ವನಿ ಎತ್ತಿದ್ದರು ಎಂದು ಸಿಇಒ ಅಶ್ವಿಜ ಅವರು ಅವರ ಜೀವನ ಹಾದಿಯನ್ನು ಮೆಲುಕು ಹಾಕಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್, ಮಹಾನಗರ ಪಾಲಿಕೆ ಆಯುಕ್ತೆ ಬಿ. ಶುಭ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ಹಾಗೂ ವಿವಿಧ ಮುಖಂಡರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


