ಮುಂಬೈ: ನಗರದ ಬಾಂದ್ರಾ ರೈಲು ನಿಲ್ದಾಣದಲ್ಲಿ ರೈಲು ಹತ್ತುವ ವೇಳೆ ನೂಕುನುಗ್ಗಲು ಉಂಟಾಗಿ, ಕಾಲ್ತುಳಿತ ಸಂಭವಿಸಿರುವ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ವಿರುದ್ಧ ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈಯಲ್ಲಿ ಪ್ರಯಾಣಿಕರನ್ನು ನಿರ್ಲಕ್ಷಿಸಲಾಗುತ್ತಿದೆ. ಆದರೆ ಇಂತಹ ಸಂದರ್ಭದಲ್ಲಿ ಸಂದರ್ಭದಲ್ಲಿ ಕೇಂದ್ರ ಸಚಿವರು ಬುಲೆಟ್ ರೈಲು ಯೋಜನೆಯನ್ನು ಜಾರಿಗೆ ತರಲು ನಿರತರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸೂಕ್ತ ಸೌಲಭ್ಯಗಳನ್ನು ಒದಗಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಳಪೆ ಮೂಲಸೌಕರ್ಯದಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಯಾಣಿಕರ ಸಮಸ್ಯೆಗಳನ್ನು ಬಗೆಹರಿಸಬೇಕಾದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಬುಲೆಟ್ ರೈಲು ಯೋಜನೆಯಲ್ಲಿ ನಿರತರಾಗಿರುವುದು ಎಷ್ಟು ಸರಿ’ ಎಂದು ರಾವುತ್ ಟೀಕಿಸಿದ್ದಾರೆ.
ಭಾನುವಾರ ಬೆಳಿಗ್ಗೆ ಮುಂಬೈನ ಬಾಂದ್ರಾ ನಿಲ್ದಾಣದಲ್ಲಿ ಉತ್ತರ ಪ್ರದೇಶದ ಗೋರಖ್ ಪುರಕ್ಕೆ ತೆರಳುವ ರೈಲು ಹತ್ತುವ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ ಒಂಬತ್ತು ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q