ಉತ್ತರ ಕನ್ನಡ ಜಿಲ್ಲೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಅಲ್ಲಿನ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪೂರ್ಣ ಬೆಂಬಲವಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನ ನಡೆಸುತ್ತಿರುವ ಹೋರಾಟದಲ್ಲಿ ನಮ್ಮ ಪಕ್ಷ ನಿಲ್ಲುತ್ತದೆ. ವರ್ಷಗಳ ಕಾಲದ ಈ ನ್ಯಾಯಯುತ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಖುದ್ಧು ಕ್ರಮ ವಹಿಸಿ ಆದ್ಯತೆ ಮೇರೆಗೆ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವಂತೆ ಅವರು ಟ್ವೀಟರ್‌ನಲ್ಲಿ ಒತ್ತಾಯಿಸಿದ್ದಾರೆ.
ರಾಜ್ಯದ ಕೆಲವೆಡೆ ಮಾತ್ರ ಸುಸರ್ಜಿತ ಆಸ್ಪತ್ರೆಗಳಿವೆ. ತುರ್ತು ಚಿಕಿತ್ಸೆ ಬೇಕೆಂದರು ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಗೆ ಹೋಗಬೇಕಾದ ಪರಿಸ್ಥಿತಿ ಇದೆ. ಹಾಗಾಗಿ ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ. ಉತ್ತರ ಕರ್ನಾಟಕ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಿ ಎಂದು ಅವರು ಹೇಳಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಗೇರಿಸುತ್ತೇನೆ ಎಂದು ಅಬ್ಬರಿಸಿ, ಬೊಬ್ಬರಿದ ಸರ್ಕಾರ ಕೋವಿಡ್ ಕಡಿಮೆ ಆದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟಿಲೇಟರ್ ಮತ್ತಿತರ ಪರಿಕರಗಳೆಲ್ಲಾ ಧೂಳು ತಿನ್ನುತ್ತಿವೆ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಆಂಬ್ಯುಲೆನ್ಸ್ ದುರಂತಗಳು ಇನ್ನೆಷ್ಟು ಆಗಬೇಕು. ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕಾ, ಆಂಬ್ಯುಲೆನ್ಸ್ ಅಪಘಾತದಿಂದ ಸರ್ಕಾರ ಕಣ್ತೆರೆಯಬೇಕು ಎಂದು ಟ್ವೀಟ್ ಮಾಡಿರುವ ಅವರು, ಜನರಿಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕೊಡುವುದು ಸರ್ಕಾರದ ಹೊಣೆಯಾಗಿದೆ ಎಂದಿದ್ದಾರೆ.
ಜೆಡಿಎಸ್ ಪಕ್ಷ ರೂಪಿಸಿರುವ ಪಂಚರತ್ನ ಕಾರ್ಯಕ್ರಮದಲ್ಲಿ ಆರೋಗ್ಯವೂ ಪ್ರಮುಖ ಅಂಶವಾಗಿದೆ. ರಾಜ್ಯದ ಜನತೆಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕಲ್ಪಿಸಿ ಕೊಡುವುದು ತಮ್ಮ ಪಕ್ಷದ ಗುರಿಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz