ಔರಾದ್ (ಬೀದರ್): ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಯಾಗಿರುವ ‘ವಿಬಿ–ಜಿ ರಾಮ್ ಜಿ’ ಯೋಜನೆ ಗ್ರಾಮೀಣಾಭಿವೃದ್ಧಿಯಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಔರಾದ್ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಕಿರಣ ಪಾಟೀಲ್ ಹೇಳಿದರು.
ತಾಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಯೋಜನೆಯಡಿ ನಡೆಯುತ್ತಿರುವ ಸಿಸಿಟಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಅವರು ಮಾತನಾಡಿದರು.
ಯೋಜನೆಯ ಪ್ರಮುಖ ಸೌಲಭ್ಯಗಳು:
ದಿನಗೂಲಿ ಹೆಚ್ಚಳ: ಯೋಜನೆಯಡಿ ದಿನಗೂಲಿ ಮೊತ್ತವನ್ನು ರೂ. 370 ರಿಂದ ರೂ. 382ಕ್ಕೆ ಏರಿಸಲಾಗಿದೆ.
ಉದ್ಯೋಗ ದಿನಗಳ ವಿಸ್ತರಣೆ: ವಾರ್ಷಿಕ ಉದ್ಯೋಗಾವಕಾಶವನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ.
ವಾರ್ಷಿಕ ಆದಾಯ: ಗ್ರಾಮೀಣ್ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ಹೊಂದಿರುವ ಪ್ರತಿಯೊಂದು ಕುಟುಂಬವೂ ವರ್ಷಕ್ಕೆ ರೂ. 47,750 ರವರೆಗೆ ಆದಾಯ ಗಳಿಸಲು ಅವಕಾಶ ಕಲ್ಪಿಸಲಾಗಿದೆ.
318 ವಿವಿಧ ಕಾಮಗಾರಿಗಳಿಗೆ ಅವಕಾಶ:
ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘಾಟೆ ಮಾತನಾಡಿ, “ಯೋಜನೆಯಡಿ 318 ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅವಕಾಶವಿದೆ. ಪ್ರತಿಯೊಂದು ಅರ್ಹ ಕುಟುಂಬವೂ ಜಾಬ್ ಕಾರ್ಡ್ ಪಡೆದುಕೊಂಡು, ಉದ್ಯೋಗಕ್ಕೆ ಬೇಡಿಕೆ ಸಲ್ಲಿಸಿ ಯೋಜನೆಯ ಸಂಪೂರ್ಣ ಪ್ರಯೋಜನ ಪಡೆಯಬೇಕು. ಗ್ರಾಮಗಳಲ್ಲಿ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳನ್ನು ಹೆಚ್ಚಿಸುವ ಮೂಲಕ ಉದ್ಯೋಗ ಸೃಷ್ಟಿ ಮತ್ತು ಕುಟುಂಬಗಳ ಆರ್ಥಿಕ ಪ್ರಗತಿಗೆ ಒತ್ತು ನೀಡಲಾಗುತ್ತಿದೆ,” ಎಂದರು.
ಈ ಪರಿಶೀಲನೆ ವೇಳೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಂದಕಿಶೋರ ಶಾಸ್ತ್ರಿ, ತಾಂತ್ರಿಕ ಸಹಾಯಕ ಶರಣಪ್ಪ, ಡಿಇಒ ಪ್ರಕಾಶ, ಗ್ರಾಮ ಕಾಯಕ ಮಿತ್ರ ಜಗದೇವಿ, ಎಂಬಿಕೆ ಉಷಾ, ಐಇಸಿ ಸಂಯೋಜಕ ಅಂಬಾದಾಸ ಪಾಟೀಲ್, ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಕೂಲಿಕಾರ್ಮಿಕರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
