ಸೊರಬ: ವಿಧಾನ ಪರಿಷತ್ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದ್ದು, ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಅವರ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ತಾಲ್ಲೂಕು ಬಿಜೆಪಿ ಛತ್ರದಹಳ್ಳಿ ಗ್ರಾಮದ ರೇಣುಕಾ ಕಲ್ಯಾಣ ಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಜನಪರ ಆಡಳಿತ ನೀಡುತ್ತಿದ್ದು, ರಾಜ್ಯದ 25ರಲ್ಲಿ 20 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಕಣದಲ್ಲಿದ್ದು, ಈ ಪೈಕಿ 15 ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಪದವೀಧರ ಕ್ಷೇತ್ರದ ಸಮಸ್ಯೆ ಹಾಗೂ ಶಿಕ್ಷಕರ ಕ್ಷೇತ್ರದ ಸಮಸ್ಯೆ ಚರ್ಚಿಸಲು ಸದಸ್ಯರಿದ್ದು, ಸ್ಥಳೀಯ ಸಂಸ್ಥೆಗಳ ಸಮಸ್ಯೆಯನ್ನು ಚರ್ಚಿಸಲು ಉತ್ತಮ ಸದಸ್ಯರ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಪಕ್ಷದ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಒಗ್ಗಟ್ಟಿನಿಂದ ಡಿ.ಎಸ್. ಅರುಣ್ ಅವರನ್ನು ಗೆಲ್ಲಿಸಬೇಕು ಎಂದ ಕರೆ ನೀಡಿದರು.
ಗೃಹ ಸಚಿವ ಅರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ ಇದೇ ಸಂದರ್ಭದಲ್ಲಿ ಮಾತನಾಡಿದರು. ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ಎಸ್. ಕುಮಾರ್ ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಮಲೆನಾಡು ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜ್, ಬಿ.ಕೆ. ಶ್ರೀನಿನಾಥ್, ಧರ್ಮಪ್ರಸಾದ್ ಇದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700