ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಜಲಾಶಯಗಳು ಭರ್ತಿಯಾಗದಿದ್ದರೂ ಸಹ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಿದ್ದನ್ನ ವಿರೋಧಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ಸರ್ಕಾರದ ನಡೆಯನ್ನ ಖಂಡಿಸಿ ಮಂಡ್ಯದ ಸಂಜಯ್ ಸರ್ಕಲ್ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಿವಿಯ ಮೇಲೆ ಹೂವಿಟ್ಟುಕೊಂಡು ರಸ್ತೆಯಲ್ಲಿ ಉರುಳಿ ಧರಣಿ ನಡೆಸಿದ್ದಾರೆ.
ರೈತರ ಕಿವಿ ಮೇಲೆ ಕಾಂಗ್ರೆಸ್ ಸರ್ಕಾರ ಹೂವು ಇಡುತ್ತಿದೆ ಎಂದು ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿ ಬಾಯಿಬಡಿದುಕೊಂಡು ಪ್ರತಿಭಟನೆ ನಡೆಸುತ್ತಿದ್ದು ರಸ್ತೆ ತಡೆದು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ .
ಪ್ರತಿಭಟನೆಗೆ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್, ಸಂಸದ ಪಿಸಿ ಮೋಹನ್ ಸೇರಿ ಹಲವು ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ.


