ತುಮಕೂರು: ನೀರುಗಂಟಿ(ನೀರು ಸರಬರಾಜು ನೌಕರರು)ಗಳ ಮುಷ್ಕರದಿಂದ ಕಳೆದ 3 ದಿನಗಳಿಂದ ನಗರದಲ್ಲಿ ಉಲ್ಬಣಗೊಂಡಿದ್ದ ನೀರಿನ ತೀವ್ರ ಸಮಸ್ಯೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬುಧವಾರ ರಾತ್ರಿ 8:30 ಗಂಟೆಗೆ 26ನೇ ವಾರ್ಡು ಅಶೋಕ್ ನಗರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಸ್ಥಳೀಯ ನಿವಾಸಿಗಳಿಂದ ನೀರಿನ ಸಮಸ್ಯೆ ಕುರಿತು ಅಹವಾಲುಗಳನ್ನು ಆಲಿಸಿದ ಅವರು ತಕ್ಷಣದ ಪರಿಹಾರವಾಗಿ ಒಂದು ದಿನದ ಮಟ್ಟಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ನಿರ್ದೇಶನ ನೀಡಿದರು.
ನೀರು ಸರಬರಾಜು ನೌಕರರ ಮುಷ್ಕರದಿಂದ ನೀರಿನ ಸಮಸ್ಯೆ ಉಂಟಾಗಿದೆ. ಇನ್ನು ಮುಂದೆ ಎಂದಿನಂತೆ ನೀರು ಸರಬರಾಜು ಮಾಡಲಾಗುವುದು ಎಂದು ಸ್ಥಳೀಯ ನಿವಾಸಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಮಾಧಾನದ ಮಾತುಗಳನ್ನು ಹೇಳಿದರು.
ಸ್ವಚ್ಛತೆ ಇಲ್ಲದಿರುವುದರಿಂದ ವಿಷಜಂತುಗಳ ಸಮಸ್ಯೆಯನ್ನು ಎದುರಿಸುತ್ತಿದ್ದು, ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ನಿವಾಸಿಗಳು ಮನವಿ ಮಾಡಿದಾಗ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಕೂಡಲೇ ಜನರು ವಾಸಿಸುವ ಸ್ಥಳದ ಸುತ್ತಮುತ್ತ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕೆಂದು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಕಾರ್ಯನಿರ್ವಾಹಕ ಇಂಜಿನಿಯರ್ ಸಂದೀಪ್, ಮತ್ತಿತರ ಅಧಿಕಾರಿಗಳು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4