ತಿಪಟೂರು: ಹಲ್ಕುರಿಕೆ ಕೆರೆಗೆ ನೀರು ಹರಿಸುವಂತೆ ಒತ್ತಾಯಿಸಿ, ಇದೇ ತಿಂಗಳ 23ರೊಳಗೆ ನೀರು ಹರಿಸಲು ಕ್ರಮ ಕೈಗೊಳ್ಳದಿದ್ದರೆ ಹಲ್ಕುರಿಕೆಯಿಂದ ತಿಪಟೂರು ಉಪವಿಭಾಗಾಧಿಕಾರಿಗಳ (ಎಸಿ) ಕಚೇರಿವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ಜೆಡಿಎಸ್ ಮುಖಂಡ ಶಾಂತ್ ಕುಮಾರ್ ಕೆ.ಟಿ. ಎಚ್ಚರಿಕೆ ನೀಡಿದರು.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಲ್ಕುರಿಕೆ ಕೆರೆಗೆ ನೀರು ಹರಿಸುವ ನಿಟ್ಟಿನಲ್ಲಿ ಶಾಸಕರು ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ, ಇದಕ್ಕೆ ಸಂಬಂಧಿಸಿದ 36 ಎಕರೆ ಜಮೀನಿನ ಎನ್ಒಸಿ (ನಿರಾಕ್ಷೇಪಣಾ ಪತ್ರ) ಪಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ವಿಳಂಬ ಮಾಡದೆ ಪ್ರಕ್ರಿಯೆ ಪೂರ್ಣಗೊಳಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ನ.23ರೊಳಗೆ ಕೆರೆಗೆ ನೀರು ಹರಿಸುವ ನಿರ್ಧಾರ ಕೈಗೊಳ್ಳದಿದ್ದರೆ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಹಲ್ಕುರಿಕೆ ನಂಜುಂಡಪ್ಪ ಅವರ ನೇತೃತ್ವದಲ್ಲಿ ರೈತರು ಹಾಗೂ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಒಗ್ಗೂಡಿ ಹಲ್ಕುರಿಕೆಯಿಂದ ತಿಪಟೂರು ಎಸಿ ಕಚೇರಿವರೆಗೆ ಬೃಹತ್ ಪಾದಯಾತ್ರೆ ನಡೆಸಲಿದ್ದಾರೆ ಎಂದು ತಿಳಿಸಿದರು.
ರೈತರ ಕೃಷಿ ಚಟುವಟಿಕೆ ಹಾಗೂ ಜನರ ಹಿತದೃಷ್ಟಿಯಿಂದ ಜನ ಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಹಲ್ಕುರಿಕೆ ಕೆರೆಗೆ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ನೀರಾವರಿ ಹೋರಾಟ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
