ಚಿತ್ರದುರ್ಗ: ರಾಜ್ಯ ರಾಜಕಾರಣದ ಹಿರಿಯ ನಾಯಕ, ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ (65) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
1961ರಲ್ಲಿ ಚಳ್ಳಕೆರೆಯಲ್ಲಿ ಜನಿಸಿದ ಡಿ.ಸುಧಾಕರ್ ಅವರು ಎನ್.ದಶರಥಯ್ಯ ಅವರ ಪುತ್ರ. ಇವರ ಚಿಕ್ಕಪ್ಪ ಎನ್. ಜಯಣ್ಣ ಅವರು ಕೂಡ ಚಳ್ಳಕೆರೆ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿದ್ದರು. ಚಿಕ್ಕಪ್ಪನ ರಾಜಕೀಯ ವ್ಯವಹಾರಗಳನ್ನು ನೋಡಿಕೊಳ್ಳುವ ಮೂಲಕ ರಾಜಕೀಯ ಪ್ರವೇಶಿಸಿದ ಸುಧಾಕರ್, ನಂತರ ತಮ್ಮದೇ ಆದ ಭದ್ರ ಬುನಾದಿ ನಿರ್ಮಿಸಿಕೊಂಡಿದ್ದರು.
- 2004: ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಸ್ಪರ್ಧಿಸಿ ಜಯಗಳಿಸುವ ಮೂಲಕ ಶಾಸಕರಾಗಿ ಆಯ್ಕೆಯಾದರು.
- 2008: ಕ್ಷೇತ್ರ ಮರುವಿಂಗಡಣೆಯಲ್ಲಿ ಚಳ್ಳಕೆರೆ ಮೀಸಲು ಕ್ಷೇತ್ರವಾದ ಹಿನ್ನೆಲೆಯಲ್ಲಿ, ಹಿರಿಯೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಜಯ ಸಾಧಿಸಿದರು. ಅಂದು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಮೊದಲ ಬಾರಿಗೆ ಮಂತ್ರಿ ಪಟ್ಟ ಅಲಂಕರಿಸಿದ್ದರು.
- 2013: ಕಾಂಗ್ರೆಸ್‌ಗೆ ಮರಳಿದ ಸುಧಾಕರ್, ಜೆಡಿಎಸ್‌ನ ಎ. ಕೃಷ್ಣಪ್ಪ ಅವರ ವಿರುದ್ಧ ಅತ್ಯಲ್ಪ ಮತಗಳ ಅಂತರದಿಂದ ಗೆದ್ದು ಮೂರನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದರು.
- 2018: ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಪೂರ್ಣಿಮಾ ಶ್ರೀನಿವಾಸ್ ವಿರುದ್ಧ ಪರಾಭವಗೊಂಡರು.
- 2023: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿ, ಕೆ. ಪೂರ್ಣಿಮಾ ಅವರ ವಿರುದ್ಧ 30,322 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಸಿದ್ದರಾಮಯ್ಯ ಸಂಪುಟದಲ್ಲಿ ಯೋಜನಾ ಮತ್ತು ಸಾಂಖ್ಯಿಕ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪರಮಾಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸುಧಾಕರ್ ಅವರು ಹಿರಿಯೂರು ಮತ್ತು ಚಳ್ಳಕೆರೆ ಭಾಗದಲ್ಲಿ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರು. ಇವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


