ತುಮಕೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ, ಸಂಬಂಧದಲ್ಲಿ ಸಹೋದರನಾಗಿರುವ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ(ಪೋಕ್ಸೋ) ನ್ಯಾಯಾಲಯವು ಜೀವಾವಧಿ ಶಿಕ್ಷೆ(ಸಾಯುವವರೆಗೂ) ಹಾಗೂ 3.50 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಗುಬ್ಬಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ಈ ಘಟನೆ ನಡೆದಿತ್ತು.ಲೋಹಿತ್ ಕುಮಾರ್ ಎಂಬಾತ ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. ಈತನಿಗೆ ಈಗಾಗಲೇ ಮದುವೆಯಾಗಿದ್ದರೂ, ಸಂಬಂಧದಲ್ಲಿ ತನಗೆ ತಂಗಿಯಾಗುವ 13 ವರ್ಷದ ಬಾಲಕಿಯನ್ನು ಮಾತನಾಡಿಸುತ್ತಿದ್ದ. ಆತನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೊಂದ ಬಾಲಕಿಯನ್ನಯನ್ನು ಕರೆದುಕೊಂಡು ಹೋಗಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ. ಬಳಿಕ ಈ ವಿಚಾರ ಯಾರಿಗಾದರೂ ತಿಳಿಸಿದರೆ, ತಂದೆ—ತಾಯಿಯನ್ನು ಸಾಯಿಸುವುದಾಗಿ ಬಾಲಕಿಯನ್ನು ಬೆದರಿಸಿ ಹಲವಾರು ಬಾರಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಇದರ ಪರಿಣಾಮ ನೊಂದ ಬಾಲಕಿ ಗರ್ಭಿಣಿಯಾಗಿದ್ದಾಳೆ ಎಂದು ತನಿಖಾಧಿಕಾರಿಗಳಾದ ಗೋಪಿನಾಥ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಅಭಿಯೋಜನೆ ಪರ ವಿಚಾರಣೆ ಮಾಡಲಾದ ಸಾಕ್ಷಿಗಳಿಂದ ಆರೋಪಿ ಲೋಹಿತ್ ಕುಮಾರ್ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆ, ಅಪರಾಧಿಗೆ ಜೀವಾವಧಿ ಶಿಕ್ಷೆ(ಸಾಯುವವರೆಗೂ) ಹಾಗೂ 3.50 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಈ ಪ್ರಕರಣದಲ್ಲಿ ಅಪರಾಧಿಯ ದಂಡದ ಮೊತ್ತದಲ್ಲಿ 3.45 ಲಕ್ಷ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 7 ಲಕ್ಷ ರೂಪಾಯಿ ಸೇರಿದಂತೆ ಒಟ್ಟು 10.45 ಲಕ್ಷ ರೂಪಾಯಿ ಪರಿಹಾರವನ್ನು ನೊಂದ ಬಾಲಕಿಗೆ ನೀಡುವಂತೆ ನ್ಯಾಯಾಧೀಶರು ಆದೇಶಿಸಿದರು.
ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ಅವರು ವಾದ ಮಂಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q