ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಎಂದು ಕೇಂದ್ರ ಸರಕಾರವನ್ನು ಯಾಕೆ ಆಗ್ರಹಿಸುತ್ತಿಲ್ಲ? ಎಂದು ಕಾವೇರಿ ನೀರಿಗಾಗಿ ಪ್ರತಿಭಟಿಸುತ್ತಿರುವ ಸಂಘಟನೆಗಳಿಗೆ ಡಿ.ಕೆ.ಶಿವಕುಮಾರ್ ಪ್ರಶ್ನೆ ಕೇಳಿದ್ದಾರೆ.
ಕಾವೇರಿ ನೀರು ವಿಚಾರವಾಗಿ ನಡೆಯುತ್ತಿರುವ ಹೋರಾಟಗಳ ಬಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಉತ್ತರಿಸಿದ ಶಿವಕುಮಾರ್, ಅನೇಕ ಸಂಘಟನೆಗಳು ಕಾವೇರಿ ನೀರಿಗಾಗಿ ಹೋರಾಟ ಮಾಡುತ್ತಿರುವುದು ಒಳ್ಳೆಯ ಕೆಲಸ. ಅವರಿಗೆ ಅಭಿನಂದನೆಗಳು. ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಮಾಡಿದಾಗ ಈ ಸಂಘಟನೆಗಳು ಎಲ್ಲಿಗೆ ಹೋಗಿದ್ದವು? ಇವು ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಎಂದು ಕೇಂದ್ರ ಸರಕಾರವನ್ನು ಯಾಕೆ ಆಗ್ರಹಿಸುತ್ತಿಲ್ಲ? ಎಂದು ಅವರು ಅಚ್ಚರಿ ವ್ಯಕ್ತಪಡಿಸಿದರು.
ಕಾವೇರಿ ಸಮಸ್ಯೆಗೆ ಮೇಕೆದಾಟು ಯೋಜನೆ ಒಂದೇ ಪರಿಹಾರ. ರಾಜಕಾರಣ ಮಾಡುವುದರಲ್ಲಿ ಪ್ರಯೋಜನ ಇಲ್ಲ. ಕಾವೇರಿ ನದಿ ನೀರಿನ ವಿಚಾರವಾಗಿ ಮಾತನಾಡುತ್ತಿರುವ ಈ ಸಂಘಟನೆಗಳಾಗಲಿ, ಬಿಜೆಪಿ, ಜನತಾ ದಳದ ನಾಯಕರುಗಳಾಗಲಿ ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಎಂದು ಕೇಂದ್ರ ಸರ್ಕಾರವನ್ನು ಏಕೆ ಆಗ್ರಹಿಸುತ್ತಿಲ್ಲ? ಪರಿಸರ ಇಲಾಖೆಯಿಂದ ಅನುಮತಿ ಯಾಕೆ ಕೊಡಿಸುತ್ತಿಲ್ಲ? ಈಗ ಹೋರಾಟ ಮಾಡುತ್ತಿರುವವರು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.


