ಬೀದರ್: ಮದ್ಯ ಸೇವಿಸಿ ಬಂದು ಕಿರುಕುಳ ನೀಡುತ್ತಿದ್ದ ಪತಿಯನ್ನು ತನ್ನ ಪೋಷಕರ ಜೊತೆ ಸೇರಿ ಪತ್ನಿಯೇ ಕೊಲೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬಾಚೆಪಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಶ್ರೀಧರ್ ಶಿವರಾಜ್ (30) ಕೊಲೆಯಾದ ವ್ಯಕ್ತಿ. ಇವರು ಕಳೆದ ಐದಾರು ವರ್ಷಗಳ ಹಿಂದೆ ಪಕ್ಕದ ಗ್ರಾಮವೊಂದರ ಸವಿತಾ ಎಂಬುವರನ್ನು ಪ್ರೀತಿಸಿ ವಿವಾಹವಾಗಿದ್ದರು. ಮೃತರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ
ಚಾಲಕ ಕೆಲಸಕ್ಕೆ ಹೋಗುತ್ತಿದ್ದ ಶ್ರೀಧರ್ ಆಗಾಗ ಕುಡಿದ ಅಮಲಿನಲ್ಲಿ ಮನೆಗೆ ಬಂದು ಪತ್ನಿಯೊಂದಿಗೆ ಜಗಳ ಮಾಡುತ್ತಿದ್ದ. ಗಂಡನ ಕಿರುಕುಳ ತಾಳಲಾರದೆ ಕೋಪಗೊಂಡ ಪತ್ನಿ ಸವಿತಾ ಫೆ.25 ರಂದು ತನ್ನ ಪೋಷಕರನ್ನು ಮನೆಗೆ ಕರೆಸಿಕೊಂಡಿದ್ದಾರೆ. ಈ ವೇಳೆ ಗಲಾಟೆ ನಡೆದಿದೆ ಎನ್ನಲಾಗಿದೆ.
ಶ್ರೀಧರ್ ನ್ನು ಕೊಲೆ ಮಾಡುವ ಉದ್ದೇಶದಿಂದ ಸವಿತಾ ಹಾಗೂ ಅವರ ತಂದೆ –ತಾಯಿ ಶ್ರೀಧರ್ ಕೈಕಾಲುಗಳನ್ನು ಹಗ್ಗದಿಂದ ಕಟ್ಟಿ ಕಬ್ಬಿಣದ ಸಲಾಕೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ. ತೀವ್ರವಾಗಿ ಹಲ್ಲೆಗೊಳಗಾದ ಶ್ರೀಧರ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಮೃತರ ತಂದೆ ಶಿವರಾಜ್ ಅವರು ನೀಡಿದ ದೂರಿನ ಮೇರೆಗೆ ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಷಯ ತಿಳಿದು ಡಿವೈಎಸ್ಪಿ ಶಿವಾನಂದ ಪವಾಡ ಶೆಟ್ಟಿ ಔರಾದ್ ಸಿಪಿಐ ರಘುವೀರ್ ಸಿಂಗ್ ಠಾಕೂರ್, ಸಂತಪೂರ ಪಿಎಸ್ ಐ ನಂದುಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4