ಗುಂಡ್ಲುಪೇಟೆ: ಹುಲಿ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ರೇಂಜ್ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ.
ದೇಶಿಪುರ ಕಾಲೋನಿಯ ಪುಟ್ಟಮ್ಮ (32) ಮೃತಪಟ್ಟವರು. ಗುರುವಾರ ಮಧ್ಯಾಹ್ನ ದನಗಳನ್ನು ಮೇಯಿಸಲು ಹೋಗಿದ್ದ ವೇಳೆ ಹುಲಿ ದಾಳಿ ಮಾಡಿದೆ.
ಮಹಿಳೆಯನ್ನು ಕೊಂದ ಬಳಿಕ ಸ್ಥಳದಿಂದ ನೂರು ಮೀಟರ್ ಗಳವರೆಗೆ ಹುಲಿ ಹೊತ್ತೊಯ್ದಿತ್ತು. ಘಟನೆಯ ಮಾಹಿತಿ ತಿಳಿದು ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಬಂಡಿಪುರ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಮಾತನಾಡಿ, ಮಹಿಳೆ ಹುಲಿ ದಾಳಿಯಿಂದ ಸಾವನ್ನಪ್ಪಿರುವುದು ದೃಢಪಟ್ಟಿದೆ. ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಹಸ್ತಾಂತರಿಸಲಾಗುವುದು. ಹುಲಿಯನ್ನು ಸೆರೆಹಿಡಿಯಲು ಕಾರ್ಯಾಚರಣೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಜೂನ್ 10 ರಂದು ಬೆಡಗುಳಿ ಗ್ರಾಮದ ವ್ಯಾಪ್ತಿಯ ರಂಗಮ್ಮ ಹುಲಿ ದಾಳಿಯಲ್ಲಿ ಸಾವನ್ನಪ್ಪಿದ್ದರು. ಈ ಘಟನೆ ನಡೆದು, ಕೆಲವೇ ಗಂಟೆಗಳಲ್ಲಿ ಅರಣ್ಯ ಇಲಾಖೆ ಹುಲಿಯನ್ನು ಸೆರೆಹಿಡಿಯಿತು. ಈಗ, 10 ದಿನಗಳ ಒಳಗೆ ಮತ್ತೊಂದು ಹುಲಿ ದಾಳಿ ಗ್ರಾಮಸ್ಥರಲ್ಲಿ ಭೀತಿಯನ್ನು ಸೃಷ್ಟಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW