ನವದೆಹಲಿ: ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಹೆಚ್ಚುವರಿಯಾಗಿ 423 ಎಕ್ರೆ ಅರಣ್ಯ ಬಳಕೆಗೆ ಅನುಮೋದನೆ ನೀಡಬೇಕೆಂಬ ಕರ್ನಾಟಕ ಸರ್ಕಾರದ ಕೇಂದ್ರ ಅರಣ್ಯ, ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಅನುಮತಿ ನೀಡಲು ನಿರಾಕರಿಸಿದೆ.
ಗುರುತ್ವಾಕರ್ಷಣೆ ಕಾಲುವೆ ನಿರ್ಮಾಣಕ್ಕೆ ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ 432 ಎಕ್ರೆ ಅರಣ್ಯ ಬಳಕೆಗೆ ಒಪ್ಪಿಗೆ ನೀಡುವಂತೆ ಕೋರಿ ರಾಜ್ಯ ಸರ್ಕಾರವು ಪರಿಸರ ಸಚಿವಾಲಯಕ್ಕೆ ಮಾರ್ಚ್‌ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು.
ಸಚಿವಾಲಯದ ಡಿಐಜಿಎಫ್ ಪ್ರಣಿತಾ ಪೌಲ್ ನೇತೃತ್ವದ ಅಧಿಕಾರಿಗಳ ತಂಡವು ಯೋಜನಾ ಸ್ಥಳದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿತ್ತು.
ರಾಜ್ಯ ಸರ್ಕಾರವು ಲೋಪಗಳನ್ನು ಸರಿಪಡಿಸಿ ಸೂಕ್ತ ಸಮಜಾಯಿಷಿ ನೀಡಿದ ಬಳಿಕವೇ ಹೆಚ್ಚುವರಿ ಅರಣ್ಯ ಬಳಕೆಗೆ ಅನುಮೋದನೆ ನೀಡಬಹುದು ಎಂದು ಸಮಿತಿ ಶಿಫಾರಸು ಮಾಡಿತ್ತು.
ನವದೆಹಲಿಯಲ್ಲಿ ಜೂನ್ 26ರಂದು ನಡೆದ ಸಲಹಾ ಸಮಿತಿಯ ಸಭೆಯಲ್ಲಿ ಈ ಯೋಜನೆಗೆ ಹೆಚ್ಚುವರಿ ಅರಣ್ಯ ಭೂಮಿ ನೀಡುವ ಬಗ್ಗೆ ಚರ್ಚೆ ನಡೆಯಿತು. ‘ಕೇಂದ್ರದಿಂದ ಅನುಮೋದನೆ ಪಡೆಯುವ ಮುನ್ನವೇ ಈ ಯೋಜನೆಗಾಗಿ ಅರಣ್ಯ ಭೂಮಿಯನ್ನು ಬಳಕೆ ಮಾಡಲಾಗಿದೆ ಎಂಬುದನ್ನು ಅಧಿಕಾರಿಗಳ ತಂಡವು ಬೊಟ್ಟು ಮಾಡಿ ತೋರಿಸಿದೆ. ನಿಯಮ ಉಲ್ಲಂಘಿಸಿದ ಸರ್ಕಾರಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ದಂಡ ವಿಧಿಸಬೇಕು’ ಎಂದು ಸಲಹಾ ಸಮಿತಿ ನಿರ್ದೇಶನ ನೀಡಿತು. ಬಳಿಕ ಪ್ರಸ್ತಾವವನ್ನು ಮುಂದಿನ ಸಭೆಗೆ ಮುಂದೂಡಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC