ತುಮಕೂರು: ತುಮಕೂರು–ರಾಯದುರ್ಗ ಹಾಗೂ ತುಮಕೂರು–ದಾವಣಗೆರೆ ಮಾರ್ಗದ ರೈಲ್ವೆ ಯೋಜನೆ ಮತ್ತು ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ವಿವಿಧ ಹಂತವಾರು ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಆಗುತ್ತಿರುವ ಸಮಸ್ಯೆ ಕುರಿತಂತೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ತುಮಕೂರು–ರಾಯದುರ್ಗ ಹಾಗೂ ತುಮಕೂರು–ದಾವಣಗೆರೆ ಮಾರ್ಗದ ರೈಲ್ವೆ ಯೋಜನೆ ಮತ್ತು ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯು ನಿಧಾನಗತಿಯಲ್ಲಿ ಸಾಗಿದೆ. ವಿವಿಧ ಹಂತವಾರು ಭೂಸ್ವಾಧೀನ ಪ್ರಕ್ರಿಯೆ ಆಗಿಲ್ಲವೆಂದು ಅಸಮಧಾನ ವ್ಯಕ್ತಪಡಿಸಿದರು.
ಭೂಸ್ವಾಧೀನಕ್ಕೆ ಎಲ್ಲೆಲ್ಲಿ ಸಮಸ್ಯೆಗಳಿವೆ? ಯಾವ ಕಾರಣದಿಂದ ನಿಂತಿವೆ ಎಂಬುದನ್ನು ಸಭೆಯಲ್ಲಿ ಪರಿಶೀಲಿಸಿ ಮಾಹಿತಿ ಪಡೆದಿದ್ದೇನೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ.
ಹೇಮಾವತಿ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಕುಣಿಗಲ್ ಸೇರಿದಂತೆ ಜಿಲ್ಲೆಯ ನಾಲ್ಕು ಏತ ನೀರಾವರಿ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆಯಲ್ಲಿರುವ ಸಮಸ್ಯೆಗಳ ಬಗ್ಗೆ ಪರಿಶೀಲಿಸಿದ್ದೇನೆ. ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ 160 ಎಕರೆ ಭೂಸ್ವಾಧೀನ ಆಗಬೇಕಿದೆ. ಕೆಐಎಡಿಬಿ ಯೋಜನೆಯಡಿ 12 ಸಾವಿರ ಎಕರೆಗೂ ಹೆಚ್ಚು ಪ್ರದೇಶದಲ್ಲಿ ಇಂಡಸ್ಟ್ರಿಯಲ್ ಹಬ್ ನಿರ್ಮಾಣ ಮಾಡಲಾಗಿದ್ದು, ಇಂಡಸ್ಟ್ರಿಯಲ್ ಹಬ್ ಗೆ ಸಂಬಂಧಿಸಿದಂತೆ 6 ಹಂತಗಳ ಪೈಕಿ 3 ಹಂತದ ಕಾಮಗಾರಿಗಳು ಪೂರ್ಣಗೊಂಡಿರುವ ಬಗ್ಗೆ ಸಭೆಯಲ್ಲಿ ಪ್ರಗತಿ ಪರಿಶೀಲಿಸಲಾಗಿದೆ ಎಂದು ತಿಳಿಸಿದರು.
ಈ ಬಾರಿ ಆಯ-ವ್ಯಯದಲ್ಲಿ ಜಿಲ್ಲೆಗೆ ಹೆಚ್ಚಿನ ಅನುದಾನ ಮತ್ತು ಯೋಜನೆಗಳನ್ನು ನೀಡುವಂತೆ ಕೇಳಿದ್ದೇನೆ. ಆಯವ್ಯಯದ ಬಗ್ಗೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದೇನೆ ಎಂದು ತಿಳಿಸಿದರಲ್ಲದೆ, ರಾಜ್ಯದಲ್ಲಿ ಪುಂಡರ ಹಾವಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ವ್ಹೀಲಿಂಗ್ ಸೇರಿದಂತೆ ಪುಂಡಾಟಿಕೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಮಾದಕ ವ್ಯಸನಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಡ್ರಗ್ಸ್ ಮುಕ್ತ ಕರ್ನಾಟಕವನ್ನಾಗಿಸುವ ನಿಟ್ಟಿನಲ್ಲಿ ಕಾರ್ಯಚರಣೆ ಕೈಗೊಳ್ಳಲಾಗಿದೆ.
ನೂರಾರು ಕೆ.ಜಿ. ಡ್ರಗ್ಸ್ ಸುಟ್ಟು ಹಾಕಿದ್ದೇವೆ. ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳು ಹಾಗೂ ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರನ್ನು ಗಡಿಪಾರು ಮಾಡಲಾಗಿದೆ. ವ್ಯಾಸಂಗಕ್ಕಾಗಿ ಬಂದು ವೀಸಾ ಮುಗಿದರೂ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವವರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4